ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

1
ಬೆಂಗಳೂರು, ಅ.21- ರಾಜ್ಯದಲ್ಲಿ ಹೆಚ್ಚುತ್ತಿರುವ ಅಮಾಯಕರ ಕಗ್ಗೊಲೆ, ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಮುಖಂಡರು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ದೂರು ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ಶಾಸಕರಾದ ವಿಜಯ್‍ಕುಮಾರ್, ಅರವಿಂದ ಲಿಂಬಾವಳಿ ಸೇರಿದಂತೆ ಮತ್ತಿತರ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ರಾಜ್ಯಪಾಲರ ಜೊತೆ ಮಾತನಾಡಿ, ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ, ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಇದರ ನೈತಿಕ ಹೊಣೆ ಹೊರಬೇಕು. ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಕಿಡಿಕಾರಿದರು.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಹೆಚ್ಚುತ್ತಿರುವ ಕೊಲೆ ಪ್ರಕರಣಗಳು, ಮಹಿಳೆಯರ ಮೇಲೆ ಹಲ್ಲೆ ಸೇರಿದಂತ ಹಲವು ವಿಷಯಗಳ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲಾಗಿದೆ. ಸರ್ಕಾರಕ್ಕೆ  ಸೂಕ್ತ ನಿರ್ದೇಶನ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ನಡೆದು ನಾಲ್ಕೈದು ದಿನಗಳು ಕಳೆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರಿಗೆ ಪ್ರಕರಣ ಬೇಧಿಸಲು ಸಾಧ್ಯವಾಗದಿದ್ದರೆ ರಾಷ್ಟ್ರೀಯ ತನಿಖಾದಳ (ಎನ್‍ಐಎ)ಕ್ಕೆ ವಹಿಸಬೇಕೆಂದು ಆಗ್ರಹಿಸಿದರು.ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಸಿಗುತ್ತಿಲ್ಲ. ಧರ್ಮ ಮತ್ತು ಸಂಸ್ಕೃತಿ ಪರ ಮಾತನಾಡುವವರನ್ನು ಹಾಡಹಗಲೇ ಕೊಲೆ ಮಾಡಲಾಗುತ್ತಿದೆ. ಅಮಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಕೊಲೆಗಡುಕರನ್ನು ಸರ್ಕಾರ ರಕ್ಷಿಸುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin