ಕೊಪ್ಪಳ ಸಿಇಒ ಹೊರಡಿಸಿದ ಸುತ್ತೋಲೆ ವಾಪಸ್ (ವಿಡಿಯೋ )

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.9-ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಾರದು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುತ್ತೋಲೆಯನ್ನು ಕೂಡಲೇ ವಾಪಸ್ ಪಡೆಯುವಂತೆ ಕೊಪ್ಪಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರವಾಣಿ ಮೂಲಕ ಸೂಚನೆ ನೀಡಿದ್ದು, ಈಗಾಗಲೇ ವಾಪಸ್ ಪಡೆಯಲಾಗಿದೆ ಎಂದು ಹೇಳಿದರು. ನಾವು ಭಾವೋದ್ವೇಗದ ಸ್ಥಿತಿಯಲ್ಲಿದ್ದೇವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬಾರದು ಮತ್ತು ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರೆ ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಅಧಿಕಾರಿ ಆದೇಶ ಹೊರಡಿಸಿರುವುದು ಸರಿಯಲ್ಲ. ಇಂತಹ ಆದೇಶದಿಂದ ರಾಜ್ಯದ ಜನರ ಭಾವನೆಗಳನ್ನು ಕೆಣಕಿದಂತಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನೆರೆಯ ತಮಿಳುನಾಡು ಕಾವೇರಿ ನದಿ ನೀರು ಕೇಳುವ ಮೂಲಕ ಕರ್ನಾಟಕದ ತಾಳ್ಮೆ ಪರೀಕ್ಷಿಸುತ್ತಿದೆ. ತಮಿಳುನಾಡಿನ ಪ್ರಯತ್ನ ಒಳ್ಳೆಯ ಬೆಳವಣಿಗೆಯಲ್ಲ ಎಂದು ಟೀಕಿಸಿದರು. ರಾಜ್ಯದ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ತಂಡ ಕಳುಹಿಸಿಲ್ಲ ಎಂದ ಅವರು, ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಅವಕಾಶವಿಲ್ಲ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಮೇಲುಸ್ತುವಾರಿ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.

Facebook Comments

Sri Raghav

Admin