ಚಿಕ್ಕಮಗಳೂರು ಜಿಲ್ಲೆ ಬರಪೀಡಿತ ಪ್ರದೇಶವೆಂದು ಘೋಷಿಸಲು ಸಿ.ಟಿ.ರವಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ct-ravi-proteste1

ಚಿಕ್ಕಮಗಳೂರು, ಸೆ.15- ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರಗಾಲದ ಛಾಯೆ ಆವರಿಸಿದೆ. ಸರ್ಕಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ರೈತರ ಸಂಕಷ್ಟಕ್ಕೆ ಮುಂದಾಗಬೇಕೆಂದು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಅಂತರ್ಜಲ ಮಟ್ಟ ಕುಸಿದಿದ್ದು, ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಮುಂತಾದ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ ಎಂದು ವಿಷಾದಿಸಿದರು.

ಇಂತಹ ಸಂದರ್ಭದಲ್ಲಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ ರೈತರು ಸಾಲ ತೀರಿಸಲಾಗಿದೆ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 1500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಸರ್ಕಾರ ಕೇವಲ 300ರಿಂದ 400 ರೈತರಿಗೆ ಮಾತ್ರ ನೆರವು ನೀಡಿದೆ ಎಂದು ಟೀಕಿಸಿದರು.ಸರ್ಕಾರದ ಖಜಾನೆಯಲ್ಲಿ ಹಣ ಇದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದು, ಆ ರೀತಿ ಹಣ ಇದ್ದರೆ ರೈತರ ಹಿತಕ್ಕೆ ಅದನ್ನು ವಿನಿಯೋಗಿಸಬೇಕು. ರಾಜ್ಯದಲ್ಲಿ ಕೊಬ್ಬರಿ, ಅಡಿಕೆ, ಕಾಫಿ ಸೇರಿದಂತೆ ಇತರೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚ ಉಪಾಧ್ಯಕ್ಷೆ ಪವಿತ್ರಾ ರಾಮಯ್ಯ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ದೇವಾನಂದ, ನಗರಸಭೆ ಅಧ್ಯಕ್ಷೆ ಕವಿತಾ ರಾಜಶೇಖರ್, ಮುಖಂಡರಾದ ಜಿ.ಎಚ್.ಲೋಕೇಶ್, ಮಾಜಿ ಶಾಸಕ ಕುಮಾರಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

 

 

► Follow us on –  Facebook / Twitter  / Google+

Facebook Comments

Sri Raghav

Admin