ನಕಲಿ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

doctor

ತುಮಕೂರು, ನ.23- ಸಾರ್ವಜನಿಕರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಜಿಲ್ಲೆಯಲ್ಲಿನ ನಕಲಿ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಿಂದುಳಿದ ತಾಲ್ಲೂಕುಗಳಾದ ಪಾವಗಡ, ಚಿಕ್ಕನಾಯಕನಹಳ್ಳಿ ಸೇರಿದಂತೆ ವಿವಿಧ ತಾಲ್ಲೂಕುಗಳಲ್ಲಿ ನಕಲಿ ವೈದ್ಯರುಗಳು ಕ್ಲೀನಿಕ್‍ಗಳನ್ನು ತೆರೆದು ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳು ಸುಧೀರ್ಘವಾಗಿ ವೈದ್ಯರೊಂದಿಗೆ ಚರ್ಚೆ ನಡೆಸಿದರು.
ವೈದ್ಯಕೀಯ ಪದವಿ ಪಡೆದು ಕೆಲವರು ವೈದ್ಯರಂತೆ ಬೋರ್ಡ್ ನೇತು ಹಾಕಿಕೊಂಡು ರೋಗಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವಂತಹ ಔಷಧಿಗಳನ್ನು ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಇಂತಹ 123 ವೈದ್ಯರು ಇರುವ ಬಗ್ಗೆ ಮಾಹಿತಿ ಇದೆ. ರೋಗಿಗಳ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಕ್ಲಿನಿಕ್‍ಗಳನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಗೆ ವಿವರಿಸಿದರು.

ಜಿಲ್ಲೆಯಲ್ಲಿರುವ ಇಂತಹ ನಕಲಿ ವೈದ್ಯರ ಬಗ್ಗೆ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇವೆ ಸಲ್ಲಿಸಬೇಕು. ಎಎನ್‍ಎಂ ಆಶಾ ಕಾರ್ಯಕರ್ತರು ವೈದ್ಯಕೀಯ ಸೇವೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯಾದ್ಯಂತ ಜನರಿಕ್ ಔಷಧಿ ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ 5 ಮಂದಿ ತಾಯಂದಿರು ಮೃತಪಟ್ಟಿದ್ದಾರೆ. ತಿಪಟೂರು, ಪಾವಗಡ, ತುಮಕೂರು, ಗುಬ್ಬಿ ಹಾಗೂ ಚಿ.ನಾ.ಹಳ್ಳಿಯಲ್ಲಿ ಈ ಪ್ರಕರಣಗಳು ಸಂಭವಿಸಿದ್ದು, ಈ ಬಗ್ಗೆ ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಂದ ಹಾಗೂ ಕುಟುಂಬದವರಿಂದ ಜಿಲ್ಲಾಧಿಕಾರಿಗಳು ಮಾಹಿತಿಯನ್ನು ಪಡೆದರು. ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮ ವಾತಾವರಣವನ್ನು ನಿರ್ಮಾಣ ಮಾಡುವ ದಿಶೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಮುಂದಾಗಬೇಕು. ಆಸ್ಪತ್ರೆಯಲ್ಲಿ ಸಂಗ್ರಹವಾಗುವ ಜೈವಿಕ ಘನತ್ಯಾಜ್ಯ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳು ಜೈವಿಕ ಘನತ್ಯಾಜ್ಯ ವಸ್ತುಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿರುವ 108 ತುರ್ತು ಆಂಬುಲೆನ್ಸ್ ಸೇವೆ ವಾಹನಗಳು ಉತ್ತಮ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಬೇಕು ಹಾಗೂ ವೈಜ್ಞಾನಿಕ   ರೀತಿಯಲ್ಲಿ ಸಮಯ ಮತ್ತು ಆಂಬುಲೆನ್ಸ್ ವಾಹನಗಳ ಅಂತರವನ್ನು ಕಾಯ್ದುಕೊಳ್ಳುವಂತೆ 108 ಸಂಸ್ಥೆಯವರಿಗೆ ಸೂಚಿಸಿದರು.

ಆತ್ಮಹತ್ಯ ರೈತ ಕುಟುಂಬಗಳಿಗೆ ಆರೋಗ್ಯ ಸೇವೆ ನೀಡಿ:-

ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸರ್ಕಾರದ ಇಂದಿರಾ ಸುರಕ್ಷಾ ಯೋಜನೆಯಡಿ ಆರೋಗ್ಯ ಸೇವೆ ಪಡೆಯಲು ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಒಟ್ಟು 32 ಮಂದಿ ರೈತ ಆತ್ಮಹತ್ಯೆ ಪ್ರಕರಣ ಘಟಿಸಿದ್ದು, ಈ ಪೈಕಿ 22 ರೈತ ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ಪರಿಹಾರ ಧನವನ್ನು ವಿತರಿಸಲಾಗಿದೆ. ಈ ಕುಟುಂಬಗಳಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಸುರಕ್ಷಾ ಆರೋಗ್ಯ ಕಾರ್ಯಕ್ರಮದಡಿ ಸೌಲಭ್ಯ ಒದಗಿಸಬೇಕು ಎಂದು ಅವರು ತಿಳಿಸಿದರು. ಈಗಿರುವ ನಿಯಮಾವಳಿ ಪ್ರಕಾರ ಜಿಲ್ಲಾಧಿಕಾರಿಗಳ ಮೂಲಕವೇ ಆರೋಗ್ಯ ಸುರಕ್ಷಾ ಟ್ರಸ್ಟ್‍ಗೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಇದರಿಂದ ರೈತ ಕುಟುಂಬಗಳಿಗೆ ಕಾಲವಿಳಂಬವಾಗಲಿದ್ದು, ನೇರವಾಗಿ ಉಪವಿಭಾಗಾಧಿಕಾರಿಗಳ ಮೂಲಕ ನೇರವಾಗಿ ಸಲ್ಲಿಸಲು ಹಾಗೂ ಟ್ರಸ್ಟ್‍ಗೆ ಪ್ರಸ್ತಾವನೆ ಸಲ್ಲಿಸಿದ ದಿನಾಂಕದಿಂದ ರೈತ ಕುಟುಂಬಕ್ಕೆ ಚಿಕಿತ್ಸೆ ದೊರೆಯಬೇಕು.

ಈಗಿನ ಸುತ್ತೋಲೆಯಂತೆ 2016-17ನೇ ಸಾಲಿನಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತಿದೆ. ಆದುದರಿಂದ 2015-16ನೇ ಸಾಲಿನ ಪ್ರಕರಣಗಳಿಗೂ ಈ ಯೋಜನೆ ಅನ್ವಯವಾಗಬೇಕು. ಈ ಮೂರು ಅಂಶಗಳ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ರಂಗಸ್ವಾಮಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಈ ಆರೋಗ್ಯ ಯೋಜನೆಯ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸುವಂತೆ ಸಂಬಂಧಿಸಿದ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿನ ಪರೀಕ್ಷೆ: ಜಿಲ್ಲೆಯಲ್ಲಿ ತೀವ್ರ ಬರಗಾಲ ಉಂಟಾಗಿರುವ ಹಿನ್ನಲೆಯಲ್ಲಿ ಪರಿಶುದ್ಧ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಜನರಿಗೆ ಪೂರೈಸುವ ನೀರನ್ನು ಕಡ್ಡಾಯವಾಗಿ ಪರೀಕ್ಷಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಬರಗಾಲದ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಹೊಸ ಬೋರ್‍ವೆಲ್‍ಗಳನ್ನು ಕೊರೆಸಲಾಗುತ್ತದೆ. ನೀರಿನ ಪರೀಕ್ಷೆ ನಡೆಸದೆ ಜನರಿಗೆ ನೀರು ಪೂರೈಕೆ ಮಾಡಬಾರದು. ವಾಟರ್ ಟ್ಯಾಂಕ್‍ಗಳಲ್ಲಿ ಪೂರೈಕೆ ಮಾಡುವ ನೀರನ್ನೂ ಕೂಡ ಪರೀಕ್ಷಿಸುವಂತೆ ಸೂಚಿಸಿದ ಅವರು, ಜಿಲ್ಲೆಗೆ ನೀರು ಪೂರೈಕೆ ಮಾಡುವ ಕೆರೆಗಳಿಂದ ಕುಲುಷಿತ ನೀರು ಪೂರೈಕೆಯಾಗದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು ನಿಗಾವಹಿಸಬೇಕು ಎಂದು ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ: ವೀರಭದ್ರಯ್ಯ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆರೋಗ್ಯಾಧಿಕಾರಿಗಳು ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಜಿಲ್ಲಾ ಸಂಯೋಜಕ ಹೆಚ್.ಇ.ಬಸವರಾಜು ಮತ್ತಿತರರು ಭಾಗವಹಿಸಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin