ಈಶ್ವರಪ್ಪ ನಾನು ಅಣ್ಣ-ತಮ್ಮಂದಿರಂತೆ ಇದ್ದೇವೆ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

yadiyurappa-And-Eshwarappa

ಬಾಗಲಕೋಟೆ, ಫೆ.10- ಮೇಲ್ಮನೆ ಪ್ರತಿಪಕ್ಷದ ನಾಯಕ ಹಾಗೂ ಪಕ್ಷದ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹಾಗೂ ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣ-ತಮ್ಮಂದಿರಂತೆ ಇದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಈಶ್ವರಪ್ಪ ಮತ್ತು ನನ್ನ ನಡುವೆ ಗೊಂದಲ ಉಂಟಾಗಿತ್ತು. ವರಿಷ್ಠರ ಮಧ್ಯ ಪ್ರವೇಶದಿಂದ ಎಲ್ಲ ಸಮಸ್ಯೆಗಳೂ ಪರಿಹಾರವಾಗಿವೆ. ಪಕ್ಷದಲ್ಲಿ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

2018ರ ಮೇನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದೇ ನಮ್ಮ ಮುಂದಿರುವ ಸವಾಲು. ಆಡಳಿತಾರೂಢ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಮತದಾರರ ನಾಡಿ ಮಿಡಿತ ಅವಲೋಕಿಸಿದರೆ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಾಹಿತಿ ಇಲ್ಲ:

ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪಕ್ಷ ಸೇರ್ಪಡೆ ಕುರಿತಂತೆ ತಮಗೆ ಈವರೆಗೂ ಯಾವುದೇ ಮಾಹಿತಿ ಇಲ್ಲ. ಅಂಬರೀಶ್ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದಾರೆ. ಮಾಹಿತಿ ಇಲ್ಲದೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.  ಅಂಬರೀಶ್ ಪ್ರಜ್ಞಾವಂತ ರಾಜಕಾರಣಿ. ಯಾವ ಸಂದರ್ಭದಲ್ಲಿ ಏನು ನಿರ್ಧಾರ ಕೈಗೊಳ್ಳಬೇಕು ಎಂಬುದಕ್ಕೆ ಅವರು ಸ್ವತಂತ್ರರು. ಪಕ್ಷಕ್ಕೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತ ನೀಡಲಾಗುವುದು. ಅಂತಿಮವಾಗಿ ತೀರ್ಮಾನ ಅವರೇ ಕೈಗೊಳ್ಳಲಿದ್ದಾರೆ ಎಂದರು. ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಎಸ್.ಎಂ.ಕೃ ಷ್ಣ ಕೂಡ ಬಿಜೆಪಿ ಸೇರ್ಪಡೆ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ವರಿಷ್ಠರು ಕೂಡ ಯಾವುದೇ ರೀತಿಯ ಮಾತುಕತೆ ನಡೆಸುವಂತೆ ನಿರ್ದೇಶನ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ನಡೆಯುತ್ತಿರುವ ಜಂಟಿ ಅಧಿವೇಶನದಲ್ಲಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಕಲಾಪಕ್ಕೆ ಗೈರು ಹಾಜರಾಗುತ್ತಿರುವುದಕ್ಕೆ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಜನ ನಮ್ಮನ್ನು ಆಯ್ಕೆ ಮಾಡುವುದೇ ನಮ್ಮ ನಮ್ಮ ಕ್ಷೇತ್ರಗಳ ಸಮಸ್ಯೆ ಪರಿಹರಿಸಬೇಕೆಂಬ ಕಾರಣಕ್ಕಾಗಿ. ಜನಪ್ರತಿನಿಧಿಗಳು ಎಷ್ಟೇ ಒತ್ತಡವಿದ್ದರೂ ಅಧಿವೇಶನದ ವೇಳೆ ಸಕ್ರಿಯವಾಗಿ ಕಲಾಪದಲ್ಲಿ ಪಾಲ್ಗೊಂಡು ಚರ್ಚೆ ನಡೆಸಬೇಕು.   ರಾಜ್ಯದಲ್ಲಿ ಬರಗಾಲ ಆವರಿಸಿರುವುದರಿಂದ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಪ್ರಚಲಿತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು ಕ್ಷೇತ್ರಗಳಿಗೆ ಅನುಕೂಲ ಕಲ್ಪಿಸಿಕೊಡುವುದು ಪ್ರತಿಯೊಬ್ಬರ ಜವಾಬ್ದಾರಿ.

ಕಲಾಪದಲ್ಲಿ ಪಾಲ್ಗೊಳ್ಳದಿದ್ದರೆ ಅದು ನಾವು ಮತದಾರರಿಗೆ ಮಾಡುವ ಅವಮಾನ. ಜನಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ತಿಳಿದುಕೊಳ್ಳಬೇಕು. ಹೋದ ಪುಟ್ಟ ಬಂದ ಪುಟ್ಟ ಎಂಬಂತೆ ಕಾಟಾಚಾರಕ್ಕೆ ಕಲಾಪದಲ್ಲಿ ಪಾಲ್ಗೊಳ್ಳಬಾರದು ಎಂದು ಕಿವಿಮಾತು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin