ಗರ್ಭಿಣಿಯರ ಆರೋಗ್ಯ ನಿರ್ವಹಣೆಗೆ ಮಾಸಿಕ 1000 ರೂ.

ಈ ಸುದ್ದಿಯನ್ನು ಶೇರ್ ಮಾಡಿ

Pregnent--02

ಚಿತ್ರದುರ್ಗ, ಏ.11– ಗರ್ಭಿಣಿ ಮಹಿಳೆಯರಿಗೆ ಅಗತ್ಯವಿರುವ ಔಷಧಿ ಖರೀದಿ ಸೇರಿದಂತೆ ಆರೋಗ್ಯ ನಿರ್ವಹಣೆಗೆ ಮಾಸಿಕ ಒಂದು ಸಾವಿರ ರೂ. ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ನವಜಾತ ಶಿಶು ನಿಗಾ ಘಟಕ ಉದ್ಘಾಟನಾ ಸಮಾರಂಭ ಹಾಗೂ 50 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಿ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಹುತೇಕ ಬಡಜನರೇ ಹೆಚ್ಚಾಗಿದ್ದಾರೆ. ಅವರೆಲ್ಲರೂ ಆರೋಗ್ಯ ಸೇವೆಗೆ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ ವೈದ್ಯರು ಮತ್ತು ಶುಶ್ರೂಷಕರು ಅವರಿಗೆ ಪ್ರೀತಿಯಿಂದ ಚಿಕಿತ್ಸೆ ನೀಡಿ ರೋಗ ವಾಸಿ ಮಾಡಬೇಕೆಂದು ಸಲಹೆ ಮಾಡಿದರು.

ಗ್ರಾಮೀಣ ಪ್ರದೇಶದ ಜನರ ಸೇವೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಇದರಿಂದ ಹಳ್ಳಿಗಾಡಿನ ಜನರು ಆರೋಗ್ಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ. ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಿಲ್ಲೆಗೆ ಮೆಡಿಕಲ್ ಕಾಲೇಜು ಮುಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಉಂಟಾಗಿದೆ. ಹಾಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಜನರು ಬರುತ್ತಿದ್ದಾರೆ. ರಾಜ್ಯ ಸರ್ಕಾರ ಮೆಡಿಕಲ್ ಕಾಲೇಜು ಮುಂಜೂರು ಮಾಡಿದೆ. ಕೂಡಲೇ ನಿರ್ದೇಶಕರ ನೇಮಕ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಿದರು.  ಜಿ.ಪಂ. ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿ.ಪಂ. ಸಿಇಒ ನಿತೇಶ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin