ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಬೇಕು : ಮೇಯರ್ ಪದ್ಮಾವತಿ ಖಡಕ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

BBMP-001

ಬೆಂಗಳೂರು, ಏ.18– ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ಕಳಪೆ ಕೆಲಸ ಮಾಡಿದರೆ ದಂಡ ವಿಧಿಸಲಾಗುವುದು. ಇದು ಮೇಯರ್ ಜಿ.ಪದ್ಮಾವತಿ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನೀಡಿದ ಎಚ್ಚರಿಕೆ.  ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀರಾಂಪುರ , ಪ್ರಕಾಶನಗರ, ರಾಜಾಜಿನಗರ ಮತ್ತು ಶಿವನಗರ ವಾರ್ಡ್‍ಗಳಲ್ಲಿ ನಗರೋತ್ಥಾನ ಯೋಜನೆಯಡಿ 24.54 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ನಿನ್ನೆ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದೇನೆ ಎಂದರು.  2015-16ನೆ ಸಾಲಿನ ನಗರೋತ್ಥಾನ ಯೋಜನೆಯಡಿ ರಾಜಾಜಿನಗರದಲ್ಲಿ ಪಾದಚಾರಿ ಮಾರ್ಗ, ರಸ್ತೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ಹೂಳೆತ್ತುವುದು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಇದುವರೆಗೂ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದೆ ಎಂದು ಹೇಳಿದರು.

ಸಕಾಲಕ್ಕೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಆಯಾ ಪ್ರದೇಶದ ಇಂಜಿನಿಯರ್, ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಎಚ್ಚರಿಸಿದರು.
ತರಾತುರಿಯಲ್ಲಿ ಕಾಮಗಾರಿ ಮಾಡಬೇಕಾದ ಅನಿವಾರ್ಯತೆಯಲ್ಲಿ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದರೆ ಅವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು ಎಂದು ಮೇಯರ್ ಎಚ್ಚರಿಕೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin