ಮುಂದಿನ ವಾರಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ..?

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha

ಬೆಂಗಳೂರು, ಏ.22– ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳ ಭರ್ತಿ ಹಾಗೂ ಮೇಲ್ಮನೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ ಮಾಡುವ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಮುಂದಿನ ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ವಾರಾಂತ್ಯದಲ್ಲಿ ಸಂಪುಟ ವಿಸ್ತರಣೆ, ಮೇಲ್ಮನೆಗೆ ನಾಮಕರಣ ಸದಸ್ಯ ನೇಮಕ ನಡೆಯಲಿದೆ. ಇದಕ್ಕಾಗಿ ನಾಳೆ ಸಿದ್ದರಾಮಯ್ಯ ನವದೆಹಲಿಗೆ ತೆರಳಲಿದ್ದಾರೆ.ನಾಳೆ ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‍ಗಾಂಧಿ, ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್, ಇನ್ನೂ ಕೆಲವು ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ, ಮೇಲ್ಮನೆ ಸದಸ್ಯರ ನೇಮಕ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯವನ್ನು ಕೂಡ ಚರ್ಚೆ ಮಾಡುವ ಸಾಧ್ಯತೆ ಇದೆ.  ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೆಚ್ಚಿನ ಹೊಣೆಗಾರಿಕೆಯನ್ನು ಹೈಕಮಾಂಡ್ ನೀಡಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ತಂತ್ರಗಾರಿಕೆಯನ್ನು ಎಣೆಯುತ್ತಿದ್ದಾರೆ.

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂದು ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಿತೀಶ್‍ಕುಮಾರ್ ಸೋನಿಯಾಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.   ಸೀತಾರಾಮ್ ಯಚೂರಿ, ಲಾಲೂಪ್ರಸಾದ್ ಯಾದವ್ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು ಎಂದು ಕರೆ ನೀಡುವ ಮೂಲಕ ಮುಂಬರುವ ಚುನಾವಣೆಯಲ್ಲಿ ಜಾತ್ಯಾತೀತ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮತ್ತೆ ಕಾಂಗ್ರೆಸನ್ನು ಅಧಿಕಾರಕ್ಕೆ ತರುವ ಸ್ಪಷ್ಟ ಗುರಿಯನ್ನು ಹೊಂದಿದ್ದಾರೆ. ಇದಕ್ಕೆ ಅಗತ್ಯವಾದ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಹೈಕಮಾಂಡ್ ಕೂಡ ಮುಖ್ಯಮಂತ್ರಿಗೆ ಮುಕ್ತ ಅವಕಾಶವನ್ನು ನೀಡಿದೆ.

ಬಿಬಿಎಂಪಿ ಚುನಾವಣೆಯಲ್ಲಿ ಸೋತು ಗೆದ್ದರು. ಜೆಡಿಎಸ್‍ನೊಂದಿಗೆ ಮೈತ್ರಿ ಸಾಧಿಸಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ. ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದಾಗಿವೆ.   ಇದೇ ರೀತಿ ಮುಂಬರುವ ಚುನಾವಣೆಯಲ್ಲೂ ಪರೋಕ್ಷ ಮೈತ್ರಿಗಳ ಮಾತುಕತೆಗಳು ನಡೆದಿವೆ. ಒಟ್ಟಾರೆ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯುವ ಪ್ರಯತ್ನ ಸಿದ್ದರಾಮಯ್ಯನವರದ್ದಾಗಿದೆ.  ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಹಲವರು ಕಣ್ಣಿಟ್ಟಿದ್ದರಾದರೂ ಉತ್ತರ ಕರ್ನಾಟಕದ ಲಿಂಗಾಯಿತರ ಮುಖಂಡ ಎಸ್.ಆರ್.ಪಾಟೀಲರ ಮೇಲೆ ಸಿಎಂ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪರಮೇಶ್ವರ್ ಅವರು ಮತ್ತೊಂದು ಬಾರಿಗೆ ಮುಂದುವರೆಯಲು ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ. ಈ ಎಲ್ಲಾ ಚರ್ಚೆಗಳು ನಾಳೆ ನವದೆಹಲಿಯಲ್ಲಿ ಬರಲಿವೆ. ಮುಂದಿನ ವಾರದಲ್ಲಿ ಸಂಪುಟ ವಿಸ್ತರಣೆ, ಮೇಲ್ಮನೆಗೆ ನೇಮಕವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಈಗಾಗಲೇ ತೀರ್ಮಾನವಾಗಿದೆ. ಮೇಲ್ಮನೆ ನೇಮಕದ ಬಗ್ಗೆಯೂ ಕೂಡ ತೀರ್ಮಾನಿಸಲಾಗಿದ್ದು, ಹೈಕಮಾಂಡ್ ಜತೆ ಚರ್ಚಿಸಿ ಪ್ರಕಟಿಸುವ ಸಾಧ್ಯತೆ ಇದೆ. ಈ ನಡುವೆ ಹಲವು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗುವುದು ಎಂದೂ ಕೂಡ ಹೇಳಲಾಗುತ್ತಿದೆ.  ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಯಾವ ರೀತಿ ಸಜ್ಜುಗೊಳಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin