ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ, 224 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ : ದೇವೇಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ಬೆಂಗಳೂರು, ಏ.28– ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ 224 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳೇ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದರು. ಕೆಂಗೇರಿ ಬಳಿ ಇರುವ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಅದೇ ಸ್ಥಳದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು.  2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ದೂರವಿಟ್ಟು ಹೋರಾಟ ಮಾಡಲಾಗುವುದು ಎಂದರು.ಆರ್ಥಿಕ ಸಂಕಷ್ಟದಿಂದಾಗಿ ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. ಉಪಚುನಾವಣೆಯಲ್ಲಿ ಸ್ಪರ್ಧಿಸದ ಪಕ್ಷಗಳು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ನಿದರ್ಶಗಳಿವೆ. ದೇಶದ ತಮಿಳುನಾಡು ಹಾಗೂ ಉತ್ತರ ಪ್ರದೇಶದಲ್ಲಿ ಈ ರೀತಿಯ ಬೆಳವಣಿಗೆಯಾಗಿತ್ತು ಎಂದರು.   ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್ ಜೊತೆಗೆ ನಾವು ಒಳ ಒಪ್ಪಂದ ಮಾಡಿಕೊಂಡಿದ್ದೇವೆ ಎನ್ನಲಾಗಿತ್ತು. ಆದರೆ ನಾವು ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ ಎಂದರು.

ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವಿನ ಕಿತ್ತಾಟದ ಲಾಭ ಪಡೆಯಲು ನಾವು ಹವಣಿಸುತ್ತಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೇವೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.   ರಾಷ್ಟ್ರೀಯ ಪಕ್ಷಗಳು ದೊಡ್ಡ ಸಮುದ್ರವಿದ್ದಂತೆ ಇಲ್ಲಿ ಯಾರು ತೇಲುತ್ತಾರೆ, ಯಾರು ಮುಳುಗುತ್ತಾರೆ ತಿಳಿಯುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.   ಎಚ್.ಡಿ.ಕುಮಾರಸ್ವಾಮಿ ಹುಬ್ಬಳ್ಳಿ ಪ್ರವಾಸದಲ್ಲಿದ್ದಾರೆ. ಅಲ್ಲಿಂದ ಬಂದ ನಂತರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಪರಿಶೀಲಿಸಿದ್ದೇನೆ ಎಂದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 118 ಸ್ಥಾನಗಳನ್ನು ಜೆಡಿಎಸ್ ಗೆಲ್ಲಲೇ ಬೇಕು, ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಅಭಿಲಾಷೆ ಎಂದರು.

ಜನರಿಗೆ ಪಕ್ಷ ವಿಭಜನೆಯಾದಾಗಿನಿಂದಲೂ ಏನೇನಾಗಿದೆ ಎಂಬುದು ಗೊತ್ತಿದೆ. ಜೆಡಿಎಸ್‍ನ ಭಿನ್ನಮತೀಯರ ಬಗ್ಗೆ ಮಾತನಾಡುವುದಿಲ್ಲ. ದೆಹಲಿಯವರೆಗೂ ಯಾರ್ಯಾರು ಹೋಗಿದ್ದಾರೆ, ಯಾರು ಕರೆದುಕೊಂಡು ಹೋಗಿದ್ದಾರೆ ಎಲ್ಲ ತಿಳಿದಿದೆ. ಇದ್ಯಾವ ಬಗ್ಗೆಯೂ ಮಾತನಾಡುವುದಿಲ್ಲ ಎಂದು ತಿಳಿಸಿದರು.  ಸಂಘಟನೆಯ ಹೋರಾಟದ ಮೂಲಕ ಪಕ್ಷ ಕಟ್ಟುತ್ತೇವೆ. ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಒಳ್ಳೆಯ ಸಂಬಂಧವಿದೆ. ಯಜಮಾನನಾಗಿ ನಾನು ತೀರ್ಮಾನ ಮಾಡುತ್ತೇನೆ. ನನ್ನ ಕುಟುಂಬ ಒಡೆಯುವುದಿಲ್ಲ. ಉತ್ತರಪ್ರದೇಶದ ಮುಲಾಯಂ ಸಿಂಗ್ ಯಾದವ್ ಅವರ ಮನೆಯಂತಾಗಲು ಬಿಡುವುದಿಲ್ಲ ಎಂದು ಹೇಳಿದರು.

ರೇವಣ್ಣಗೆ ಹೆಚ್ಚಿನ ಉತ್ಸಾಹವಿದೆ. ಆದರೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿ ಪಕ್ಷವನ್ನು ಬೆಳೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin