ಗ್ರಾಮೀಣಾಭಿವೃದ್ಧಿ ಸಚಿವರ ಸ್ವಕ್ಷೇತ್ರದಲ್ಲೇ 40 ದಿನಕ್ಕೊಮ್ಮೆ ಕುಡಿಯುವ ನೀರು : ಬಿಎಸ್‍ವೈ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

BSY
ಗದಗ, ಮೇ 23- ಪಟ್ಟಣದಲ್ಲಿ 40 ದಿನಕ್ಕೊಮ್ಮೆ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಸ್ವತಃ ಗ್ರಾಮೀಣಾಭಿವೃದ್ಧಿ ಸಚಿವರ ಸ್ವಕ್ಷೇತ್ರದಲ್ಲೇ ಈ ರೀತಿಯಾದರೆ ರಾಜ್ಯದ ವಿವಿಧೆಡೆ ಬರದಿಂದ ತತ್ತರಿಸಿರುವ ಜನರಿಗೆ ಸರ್ಕಾರ ಯಾವ ರೀತಿ ಸ್ಪಂದಿಸಿದೆ ಎಂಬುದು ತಿಳಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಟೀಕಿಸುವುದರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ನಿಷ್ಠೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಆರೋಪಿಸಿದ್ದಾರೆ.
ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ನಾನು ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ. ನಾನು ಉಪ ಮುಖ್ಯಮಂತ್ರಿ ಯಾಗಿದ್ದಾಗಲೇ ಇದಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲು ಕೂಡ ನಿರ್ಧರಿಸಿದ್ದೇನೆ. ಸದ್ಯದಲ್ಲಿಯೇ ದಿನಾಂಕವನ್ನು ಕೂಡ ನಿಗದಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದಲಿತರ ಮನೆಯಲ್ಲಿ ಉಪಹಾರ: ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಲಕ್ಷ್ಮಣ ಮಲ್ಲಣ್ಣವರ್ ಅವರ ಮನೆಗೆ ಸಂಸದೆ ಶೋಭಾ ಕರಂದ್ಲಾಜೆ, ಮುಖಂಡರಾದ ಶಿವಕುಮಾರ್ ಉದಾಸಿ, ಸಿ.ಸಿ.ಪಾಟೀಲ್, ಗೋವಿಂದ ಕಾರಜೋಳ, ಕಳಕಪ್ಪ ಬಂಡಿ ಅವರೊಂದಿಗೆ ಭೇಟಿ ನೀಡಿದ ಯಡಿಯೂರಪ್ಪ ಉಪ್ಪಿಟ್ಟು, ಚುರುಮುರಿ ಒಗ್ಗರಣೆ, ಮಿರ್ಚಿ ಸವಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin