‘ಕಾನೂನು ಸುವ್ಯವಸ್ಥೆ ನಿರ್ವಹಿಸಲಾಗದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ’

ಈ ಸುದ್ದಿಯನ್ನು ಶೇರ್ ಮಾಡಿ

Sadanandagowda--01

ಬೆಂಗಳೂರು, ಜು.9-ಕಾನೂನು ಸುವ್ಯವಸ್ಥೆ ನಿರ್ವಹಿಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ಕೇಂದ್ರ ಸರ್ಕಾರ 24 ಗಂಟೆಯೊಳಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ತರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಸಿದ್ದರಾಮಯ್ಯ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಅನಗತ್ಯ ಆರೋಪ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಗೃಹ ಇಲಾಖೆಗೆ ಸಚಿವರೇ ಇಲ್ಲ. ಮುಖ್ಯಮಂತ್ರಿ ಬಳಿ ಈ ಖಾತೆಯನ್ನು ಇಟ್ಟುಕೊಳ್ಳಲಾಗಿದೆ. ಯಾವ ಭಾಗದಲ್ಲಿ ಏನು ನಡೆಯುತ್ತದೆ ಎಂಬುದು ಅವರಿಗೆ ತಿಳಿಯುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ನಿಮ್ಮಿಂದ ಸಾಧ್ಯವಾಗದಿದ್ದರೆ ಹೇಳಿ. ಕೇಂದ್ರ ಸರ್ಕಾರ ಕೇವಲ 24 ಗಂಟೆಯೊಳಗೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿಸುವ್ಯವಸ್ಥೆ ಜಾರಿ ಮಾಡುತ್ತದೆ. ನಿಮ್ಮಿಂದ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಗೌರವಯುತವಾಗಿ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಸದಾನಂದಗೌಡ ವ್ಯಂಗ್ಯವಾಡಿದರು.  ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಹೊಣೆಗಾರಿಕೆ ಕೇಂದ್ರ ಸರ್ಕಾರ ಒಂದೇ ಒಂದು ಸಣ್ಣ ನಿರ್ದೇಶನ ನೀಡಿದರೂ ಕೇಂದ್ರವು ಎಲ್ಲ ವಿಷಯದಲ್ಲಿ ಮೂಗು ತೂರಿಸುತ್ತದೆ ಎಂದು ಆರೋಪ ಮಾಡುತ್ತೀರಿ. ಜನರಿಗೆ ರಕ್ಷಣೆ ಕೊಡಲು ಸಾಧ್ಯವಾಗದಿದ್ದರೆ ಆಡಳಿತದಲ್ಲಿ ಇರುವುದಾದರೂ ಏಕೆ ಎಂದು ಪ್ರಶ್ನಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಘಟನಾವಳಿಗಳ ಬಗ್ಗೆ ಈಗಾಗಲೇ ನಾವು ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಶಾಂತಿ ಸುವ್ಯವಸ್ಥೆ ನೆಲೆಸಿ ಎಲ್ಲರೂ ನೆಮ್ಮದಿಯಿಂದ ಬದುಕಬೇಕೆಂಬುದು ನಮ್ಮ ಉದ್ದೇಶ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  ಎರಡು ದಿನಗಳ ಹಿಂದೆ ಮಂಗಳೂರಿಗೆ ಸಿದ್ದರಾಮಯ್ಯ ಭೇಟಿ ನೀಡಿದರು. ಅಪ್ಪಿತಪ್ಪಿಯೂ ಇಲ್ಲಿ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆಯನ್ನೂ ನಡೆಸಲಿಲ್ಲ. ಬೆಂಗಳೂರಿಗೆ ಬಂದ ಮೇಲೆ ಕಾಟಾಚಾರಕ್ಕೆ ಎಂಬಂತೆ ಮಾಧ್ಯಮಗಳಿಗೆ ಹೇಳಿಕೆ ನೀಡುವುದನ್ನು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ. ನಿಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಂಘಪರಿವಾರ, ಬಿಜೆಪಿ ಸಂಘಟನೆಗಳ ಮೇಲೆ ಆಪಾದನೆ ಮಾಡುವುದನ್ನು ನಿಲ್ಲಿಸಿ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಜನರನ್ನು ಉದ್ವಿಗ್ನಗೊಳಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಗೆ ನಡೆದುಕೊಳ್ಳಬೇಕೆಂಬುದನ್ನು ಕಾಂಗ್ರೆಸ್ ತಿಳಿಯಬೇಕು. ಉರಿಯುವ ಬೆಂಕಿಯಲ್ಲಿ ತುಪ್ಪ ಸುರಿಯುವ ಕೆಲಸ ಮಾಡಬೇಡಿ ಎಂದು ಸದಾನಂದಗೌಡ ಸಲಹೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪರಿಸ್ಥಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಬೇಜವಾಬ್ದಾರಿ ಹೇಳಿಕೆಗಳಿಂದ ಜನರು ಆವೇಶಕ್ಕೆ ಒಳಗಾಗಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮತದಾರರನ್ನು ಇವರ ಕಿಸೆಯಲ್ಲಿ ಇಟ್ಟುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಕೊನೆಯ ವರ್ಷದಲ್ಲಿ ಆಡಳಿತ ನಡೆಸುತ್ತಿದೆ. ಪ್ರಾಯಶಃ ಗಂಟುಮೂಟೆ ಕಟ್ಟುವ ಸಮಯ ಬಂದಿದೆ ಎಂದು ವ್ಯಂಗ್ಯವಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin