ಇಂಗ್ಲಿಷ್ ಶಾಲೆಯಲ್ಲಿ ಕನ್ನಡ, ಕನ್ನಡ ಶಾಲೆಯಲ್ಲಿ ಇಂಗ್ಲಿಷ್ ಒಂದು ವಿಷಯ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

School--01

ಬೆಂಗಳೂರು, ಜು.13- ಕೇಂದ್ರಿಯ ವಿಶ್ವವಿದ್ಯಾಲಯಗಳು, ಕೇಂದ್ರ ಪಠ್ಯಕ್ರಮದ ಶಾಲೆಗಳು ಸೇರಿದಂತೆ ಎಲ್ಲಾ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲೂ ಪ್ರಸಕ್ತ ವರ್ಷದಿಂದ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜತೆಗೆ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‍ಸೇಠ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 29ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಿದೆ. ಯಾವುದೇ ಶಾಲೆಗಳು ಕನ್ನಡ ಕಲಿಸದೇ ಇದ್ದರೆ ಅಂತಹ ಶಾಲೆಗಳಿಗೆ ಮುಂದಿನ ವರ್ಷದಿಂದ ಎನ್‍ಒಸಿ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷನ್ನು ಒಂದು ವಿಷಯವನ್ನಾಗಿ ಕಲಿಸಲು ಈಗಾಗಲೇ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ವರ್ಷದಿಂದಲೇ ಇಂಗ್ಲಿಷ್ ಕಲಿಕೆ ಆರಂಭವಾಗಲಿದೆ ಎಂದರು. ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆನ್‍ಲೈನ್ ಅರ್ಜಿ ಕರೆಯಲಾಗಿತ್ತು 1.29 ಲಕ್ಷ ಸೀಟುಗಳನ್ನು ಕಾಯ್ದಿರಿಸಲಾಗಿತ್ತು. ಅರ್ಜಿ ಸಲ್ಲಿಸಿದವರಿಗೆ ಎರಡ್ಮೂರು ಬಾರಿ ಎಸ್‍ಎಂಎಸ್ ಕಳುಹಿಸಲಾಗಿದೆ. ಸುಮಾರು 42 ಶಾಲೆಗಳು ಆರ್‍ಟಿಇ ಸೀಟು ನೀಡಲು ನಿರಾಕರಿಸಿದ್ದವು. ಅಂತಹ ಶಾಲೆಗಳಿಗೆ ನೋಟಿಸ್ ನೀಡಲಾಗಿದ್ದು, ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಶಾಲೆಗಳು ಆರ್‍ಟಿಇ ಸೀಟನ್ನು ನಿರಾಕರಿಸಿದರೆ ಕಠಿಣ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಶೂನ್ಯ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಂತಹ ಶಾಲೆಗಳಲ್ಲಿ ಮೂಲಸೌಲಭ್ಯ ಇಲ್ಲದೆ ಇದ್ದರೆ ಶೈಕ್ಷಣಿಕ ಮಾನ್ಯತೆಯನ್ನು ರದ್ದುಪಡಿಸಲಾಗುವುದು. ಶಿಕ್ಷಕರ ಸಂಖ್ಯೆಯನ್ನು ಕಡಿತಗೊಳಿಸಲಾಗುವುದು ಎಂದು ಸೇಠ್ ವಿವರಿಸಿದರು. ಆರ್‍ಟಿಇ ದೂರು ದುಮ್ಮಾನಗಳ ಆಲಿಕೆಗೆ ಪ್ರತ್ಯೇಕ ಕೋಶ ಸ್ಥಾಪಿಸಲಾಗಿದೆ. ಶಿಕ್ಷಣ ಇಲಾಖೆಯ ವಿವಿಧ ಮಾಹಿತಿಗಳನ್ನು ಪಡೆಯಲು ಇಚ್ಚಿಸುವವರಿಗೆ ಅನುಕೂಲ ಮಾಡಿಕೊಡಲು ಕಾಲ್‍ಸೆಂಟರ್ ಮಾದರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಪ್ರಾಥಮಿಕ ಪೂರ್ವ(ನರ್ಸರಿ)ಶಾಲೆಗಳನ್ನು ಆರಂಭಿಸುವುದಕ್ಕಿಂತಲೂ ಅಂಗನವಾಡಿಗಳನ್ನು ಪ್ರಾಥಮಿಕ ಶಿಕ್ಷಣದ ಜತೆಗೆ ಸೇರ್ಪಡೆ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin