ಶಿಷ್ಟಾಚಾರ ಉಲ್ಲಂಘಿಸಿದ ಡಿಐಜಿಗೆ ನೋಟಿಸ್ ನೀಡಲಾಗಿದೆ : ಸಿಎಂ

S-Siddaramaiha

ಮೈಸೂರು, ಜು.14- ಪರಪ್ಪನಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಕಾರಾಗೃಹದ ಡಿಐಜಿಗೆ ನೋಟಿಸ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಡಿಐಜಿ ರೂಪಾ ಅವರು ಅಲ್ಲಿನ ಅಕ್ರಮ, ಅವ್ಯವಹಾರದ ಬಗ್ಗೆ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದ ಗಮನಕ್ಕೆ ತರಬೇಕಾಗಿತ್ತು. ಅದನ್ನು ಬಿಟ್ಟು ನೇರವಾಗಿ ಮಾಧ್ಯಮಗಳ ಮುಂದೆ ಹೋಗಿದ್ದಾರೆ. ಅಧಿಕಾರಿಗಳು ಮಾಧ್ಯಮದ ಮುಂದೆ ಹೋಗಬಾರದು ಎಂಬ ಕಾನೂನು ಇದೆ. ಆ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದರು.

ಪದೇ ಪದೇ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದಕ್ಕೆ ನೋಟಿಸ್ ನೀಡಲಾಗಿದೆ. ಕಾನುನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸರ್ಕಾರಕ್ಕಾಗಲಿ, ಹಿರಿಯ ಅಧಿಕಾರಿಗಳಿಗಾಗಿ ವರದಿ ನೀಡಬಹುದಾಗಿತ್ತು. ಅದ್ಯಾವುದನ್ನೂ ಅವರು ಮಾಡಿಲ್ಲದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೊಳಗಾಗಿರುವ ಎಐಡಿಎಂಕೆ ಮುಖಂಡರಾದ ಶಶಿಕಲಾ ಅವರಿಗೆ ರಾಜಾತಿಥ್ಯ ಮಾಡಲಾಗಿದೆ.

ಅವರಿಂದ ಕಾರಾಗೃಹ ಇಲಾಖೆಗಳ ಡಿಜಿಪಿ ಅವರು 2 ಕೋಟಿ ರೂ. ಲಂಚ ವಸೂಲಿ ಮಾಡಿದ್ದಾರೆ ಎಂಬಿತ್ಯಾದಿ ಆರೋಪಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಡಿಐಜಿ ರೂಪಾ ಬರೆದಿದ್ದ ಪತ್ರ ವಿವಾದ ಎಬ್ಬಿಸಿತ್ತು ಮತ್ತು ಗಂಭೀರ ಚರ್ಚೆ ನಡೆದಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin