ಆರ್‍ಜೆಡಿ-ಜೆಡಿಯು ಬಿಕ್ಕಟ್ಟು : ಸೋನಿಯಾ ಮಧ್ಯಸ್ಥಿಕೆಗೆ ನಿತೀಶ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Sonia-Gandhi--01

ಪಾಟ್ನಾ, ಸೆ.16- ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಅವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಬಿಹಾರ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ರಾಷ್ಟ್ರೀಯ ಜನತಾದಳ (ಆರ್‍ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಇಂದು ಸಂಜೆ ಪ್ರತ್ಯೇಕವಾಗಿ ಸಭೆ ಕರೆದಿದ್ದು, ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.  ಈ ಎಲ್ಲ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸುವಂತೆ ನಿತೀಶ್ ಕುಮಾರ್ ಮನವಿ ಮಾಡಿದ್ದಾರೆ. ನಾಳೆ ನಡೆಯುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದ್ದರೂ ಮೈತ್ರಿಕೂಟದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ವಿಷಯವೇ ಪ್ರಮುಖ ಕಾರ್ಯಸೂಚಿ (ಅಜೆಂಡಾ) ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿಬಿಐ ಅಧಿಕಾರಿಗಳು ಎಫ್‍ಐಆರ್ ದಾಖಲಿಸಿದ ತಕ್ಷಣ ತಮ್ಮ ಮಗ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಇದು ಬಿಜೆಪಿಯ ರಾಜಕೀಯ ಷಡ್ಯಂತ್ರ ಎಂದು ಲಾಲು ಪ್ರಸಾದ್ ಯಾದವ್ ಹೇಳಿತ್ತಲೇ ಬಂದಿದ್ದಾರೆ. ಆದರೆ, ಇದಕ್ಕೆ ಪ್ರತಿಯಾಗಿ ಭ್ರಷ್ಟಾಚಾರ ಆರೋಪ ಹೊತ್ತಿರುವ ತೇಜಸ್ವಿ ಅವರನ್ನು ಇಟ್ಟುಕೊಂಡು ಸರ್ಕಾರ ಮುನ್ನಡೆಸುವುದು ಕಷ್ಟ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಇದನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ.

ಒಂದು ವೇಳೆ ಲಾಲು ಪ್ರಸಾದ್ ಯಾದವ್ ತಮ್ಮ ನಿಲುವಿಗೆ ಅಂಟಿಕೊಂಡರೆ ಬಿಕ್ಕಟ್ಟು ಇನ್ನಷ್ಟು ತೀವ್ರಗೊಂಡು ನಿತೀಶ್ ಕುಮಾರ್ ಅವರು ತೇಜಸ್ವಿಯನ್ನು ಉಪಮುಖ್ಯಮಂತ್ರಿ ಹುದ್ದೆಯಿಂದ ಕಿತ್ತುಹಾಕುವ ಸಾಧ್ಯತೆ ಇದೆ. ಆಗ ಆರ್‍ಜೆಡಿ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯಲಿದೆ. ಆದರೆ, ಈಗಾಗಲೇ ಸರ್ಕಾರಕ್ಕೆ ಬಿಜೆಪಿ ಬಾಹ್ಯ ಬೆಂಬಲ ನೀಡಿರುವುದರಿಂದ ಸರ್ಕಾರಕ್ಕೆ ಅಪಾಯವಾಗಲಾರದು. ಆದರೆ, ಇದು ಪ್ರಾದೇಶಿಕ ಪಕ್ಷಗಳ ಮಹಾಮೈತ್ರಿಗೆ ಹಿನ್ನಡೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಈಗಾಗಲೇ ಹೇಳಿಕೆ ನೀಡಿ, ಉಭಯ ಪಕ್ಷಗಳು ಸಂಯಮ ನೀತಿ ಅನುಸರಿಸಿ ಮೈತ್ರಿ ಮುಂದುವರಿಸಬೇಕು ಎಂದು ಸಲಹೆ ನೀಡಿದ್ದಾರೆ. ನಿತೀಶ್ ಕುಮಾರ್ ಕೂಡ ಕಾಂಗ್ರೆಸ್ ಅಧಿನಾಯಕಿ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಇಂದು ಸಂಜೆ ಎರಡು ಪಕ್ಷಗಳ ಶಾಸಕಾಂಗ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಒಟ್ಟಾರೆ ಇಂದಿನ ಸಭೆಯ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin