ಉಪ ರಾಷ್ಟ್ರಪತಿ ಚುನಾವಣೆ : ವೆಂಕಯ್ಯ ಬೆಂಬಲಕ್ಕಾಗಿ ಮೋದಿ ಉಪತಂತ್ರ

Venkaiha-Naidu--01

ಕೊಲ್ಕತ/ಚೆನ್ನೈ, ಜು.18-ಉಪ ರಾಷ್ಟ್ರಪತಿ ಚುನಾವಣೆಗಾಗಿ ಎನ್‍ಡಿಎ ಅಭ್ಯರ್ಥಿಯಾಗಿರುವ ಎಂ.ವೆಂಕಯ್ಯ ನಾಯ್ಡು ಅವರಿಗೆ ಬೆಂಬಲ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಈಗ ಕಾರ್ಯೋನ್ಮುಖರಾಗಿದ್ದಾರೆ. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅವರು ನಾಯ್ಡು ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಅಲ್ಲದೇ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ (ಅಮ್ಮಾ ಬಣ) ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕೆಪಿಎಸ್ ಅವರೊಂದಿಗೂ ಮೋದಿ ಕಳೆದ ರಾತ್ರಿ ದೂರವಾಣಿ ಮುಖೇನ ಮಾತನಾಡಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್‍ಗೆ ಬೆಂಬಲ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ ಉಪ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿರುವ ನಾಯ್ಡು ಅವರಿಗೂ ಇದೇ ಸಹಕಾರ ಮುಂದುವರಿಸುವಂತೆಯೂ ಮನವಿ ಮಾಡಿದ್ದಾರೆ ಎಂದು ನಿನ್ನೆ ರಾತ್ರಿ ಬಿಡುಗಡೆ ಮಾಡಲಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಳನಿಸ್ವಾಮಿ ಅವರು ನಾಯ್ಡು ಅವರಿಗೂ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.  ನವದೆಹಲಿಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ 68 ವರ್ಷದ ನಾಯ್ಡು ಅವರನ್ನು ಉಪ ರಾಷ್ಟ್ರಪತಿ ಚುನಾವಣೆಗಾಗಿ ಎನ್‍ಡಿಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು. ಆ.5ರಂದು ನಡೆಯುವ ಚುನಾವಣೆಯಲ್ಲಿ ನಾಯ್ಡು, ಯುಪಿಎ ಅಭ್ಯರ್ಥಿ ಮತ್ತು ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ವಿರುದ್ಧ ಸ್ಪರ್ಧಿಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin