ಬಾಲ ಬಿಚ್ಚಿದರೆ ಕೋಕಾ ಕೇಸ್ : ಸಮಾಜಘಾತುಕರಿಗೆ ಮೈಸೂರು ಪೊಲೀಸ್ ಆಯುಕ್ತರ ವಾರ್ನಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Mysuru--01

ಮೈಸೂರು, ಜು.19 – ರೌಡಿ ಚಟುವಟಿಕೆಯಲ್ಲಿ ತೊಡಗಿದರೆ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಅವರು ಪುಂಡ-ಪೋಕರಿಗಳಿಗೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಮಾಯಕರನ್ನು ಬೆದರಿಸಿ ಹಿಂಸೆ ನೀಡುವುದು, ಅಶಾಂತಿ ಉಂಟುಮಾಡುವುದು, ಕೊಲೆ ಯತ್ನ, ಒಳಸಂಚು ರೂಪಿಸುವುದು ಸೇರಿದಂತೆ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವುದಲ್ಲದೆ ಅಂತಹವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ದಸರಾ ವಿಶೇಷ ಭದ್ರತೆ: ಈ ಬಾರಿಯ ಮೈಸೂರು ದಸರಾಗೆ ವಿಶೇಷ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವಕ್ಕೆ ವಿಶೇಷ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಜು.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಲಿದೆ. ಅದಕ್ಕೂ ಮುನ್ನ ದಸರಾ ವಿಶೇಷ ಭದ್ರತೆಗೆ ಪೂರ್ವಭಾವಿ ಸಭೆ ನಡೆಸಿ ತಯಾರಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಂಬೂ ಸವಾರಿ ವೀಕ್ಷಣೆಗೆ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಶೇಷ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡವನ್ನು ಕರೆಸಿಕೊಳ್ಳಲಾಗುತ್ತದೆ. ಹಾಗೆಯೇ ಶ್ವಾನದಳ, ಬಾಂಬ್ ಪತ್ತೆದಳವನ್ನು ಬಲಪಡಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin