ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

Rain--01

ಬೆಂಗಳೂರು, ಜು.20-ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಮುಂಗಾರು ತೀವ್ರಗೊಂಡಿದ್ದು, ಇನ್ನು ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ತಿಳಿಸಿದರು. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 200 ಮಿ.ಮೀಟರ್‍ಗೂ ಹೆಚ್ಚು ಭಾರೀ ಮಳೆಯಾಗಿದೆ. ಈ ವರ್ಷದಲ್ಲೇ ರಾಜ್ಯದಲ್ಲಿ ಬಿದ್ದಿರುವ ಅತ್ಯಧಿಕ ಪ್ರಮಾಣದ ಮಳೆ ಇದಾಗಿದೆ. ಭಾರೀ ಮಳೆಯಾಗಿರುವುದರಿಂದ ಹಳ್ಳ-ಕೊಳ್ಳ ಹಾಗೂ ಕೆಲವು ನದಿಗಳು ಮೈದುಂಬಿ ಹರಿಯುತ್ತಿವೆ.

ಜಲಾಶಯಗಳಿಗೂ ಕೂಡ ಒಳ ಹರಿವು ಗಣನೀಯವಾಗಿ ಏರಿಕೆಯಾಗುತ್ತಿದೆ ಎಂದು ಹೇಳಿದರು. ನಿನ್ನೆ ಕೊಡಗಿನ ಭಾಗಮಂಡಲದಲ್ಲಿ 266 ಮಿ.ಮೀ., ಚಿಕ್ಕಮಗಳೂರು ಜಿಲ್ಲೆಯಲ್ಲಿ 210 ಮಿ.ಮೀ, ಉತ್ತರ ಕನ್ನಡದಲ್ಲಿ 200 ಮಿ.ಮೀಟರ್‍ನಷ್ಟು ಭಾರೀ ಮಳೆಯಾಗಿದೆ.   ಒಟ್ಟಾರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ ಎಂದು ಹೇಳಿದರು.

ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮೋಡ ಕವಿದ ವಾತಾವರಣವಿದ್ದು, ಜು.22ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin