ಉಪಾಹಾರ ಕೂಟದಲ್ಲಿ ರಾಜ್ಯ ಬಿಜೆಪಿ ಸಂಸದರನ್ನು ತೀವ್ರ ತಾರಾಟೆಗೆ ತೆಗೆದುಕೊಂಡ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Modi--0144

ನವದೆಹಲಿ, ಆ.4-ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಪ್ರಚಾರ ಮಾಡುವಲ್ಲಿ ವಿಫಲರಾಗಿದ್ದೀರಿ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಬಿಜೆಪಿ ಸಂಸದರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಫಸಲು ಬಿಮಾ ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ವ್ಯಾಪಕವಾಗಿ ಪ್ರಚಾರ ಮಾಡುವಂತೆಯೂ ಅವರು ಸಂಸದರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದಕ್ಷಿಣ ಭಾರತದ ಬಿಜೆಪಿ ಸದಸ್ಯರಿಗಾಗಿ ತಮ್ಮ ನಿವಾಸದಲ್ಲಿ ಇಂದು ಆಯೋಜಿಸಿದ್ದ ಬೆಳಗಿನ ಉಪಾಹಾರ ಸಭೆಯಲ್ಲಿ ಮೋದಿ ರಾಜ್ಯದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನೀವು ವಿಫಲರಾಗಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರೆಂದು ಮೂಲಗಳು ತಿಳಿಸಿವೆ.  ಈ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗಿರುವ ತೊಡಕುಗಳ ನಿವಾರಣೆಗೆ ತಕ್ಷಣ ಕ್ರಮ ಕೈಗೊಂಡು ತ್ವರಿತವಾಗಿ ಕಾರ್ಯಗತಗೊಳಿಸುವಂತೆ ಮೋದಿ ಸೂಚಿಸಿದ್ದಾರೆ.

ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ನಿರ್ಮಲ ಸೀತಾರಾಮನ್, ರಾಜ್ಯ ಸಂಸದರಾದ ಬಿ.ಎಸ್.ಯಡಿಯೂರಪ್ಪ , ಜಿ.ಎಂ.ಸಿದ್ದೇಶ್ವರ್, ಕರಡಿ ಸಂಗಣ್ಣ , ಶೋಭ ಕರಂದ್ಲಾಜೆ, ಪಿ.ಸಿ.ಮೋಹನ್, ನಳಿನ್‍ಕುಮಾರ್ ಕಟೀಲ್, ಸುರೇಶ್ ಅಂಗಡಿ, ಪ್ರತಾಪ್ ಸಿಂಹ, ಶ್ರೀರಾಮಲು, ರಾಜ್ಯಸಭಾ ಸದಸ್ಯರಾದ ಪ್ರಭಾಕರ್ ಕೋರೆ ಸೇರಿದಂತೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.  ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಪೂರ್ವ ತಯಾರಿ ಬಗ್ಗೆ ಚರ್ಚಿಸುವ ಉದ್ದೇಶದಿಂದಲೂ ಕರೆಯಲಾಗಿದ್ದ ಈ ಸಭೆಯಲ್ಲಿ ಸಂಸದರ ಸಾಧನೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬ ಬಗ್ಗೆಯೂ ಮೋದಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಬೆಳಗ್ಗೆ 9 ಗಂಟೆಗೆ ಆರಂಭವಾದ ಈ ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಪ್ರಧಾನಿ ಸಂಸದರಿಂದ ಕೆಲವೊಂದು ಮಾಹಿತಿಗಳನ್ನು ಪಡೆದರು. ಕೆಲವು ತಿಂಗಳಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಬೇಕಾಗಿರುವುದರಿಂದ ಕೈಗೊಳ್ಳಬೇಕಾದ ಸಿದ್ಧತೆಗಳು ಮತ್ತು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಅವರು ಸಂಸದರಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು ಎನ್ನಲಾಗಿದೆ.  ಕರ್ನಾಟಕದಲ್ಲಿ ಎದ್ದಿರುವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು, ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ರೂಪಿಸಲು ಕಾಂಗ್ರೆಸ್ ಯತ್ನ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ಸರಣಿ ದಾಳಿ ಮುಂತಾದ ವಿದ್ಯಮಾನಗಳ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆದರು ಎಂದು ಉನ್ನತ ಮೂಲಗಳು ತಿಳಿಸಿವೆ.
ಮೇಲ್ನೋಟಕ್ಕೆ ದಕ್ಷಿಣ ಭಾರತ, ಅಸ್ಸೋಂ ರಾಜ್ಯಗಳ ಸಂಸದರ ಸಭೆ ಕರೆಯಲಾಗಿತ್ತಾದರೂ ವಿಶೇಷವಾಗಿ ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಸಂಸದರಿಂದ ಪ್ರಧಾನಿ ಮಾಹಿತಿ ಪಡೆದಿದ್ದಾರೆ.

2018ರ ಮಾರ್ಚ್-ಏಪ್ರಿಲ್‍ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು , ಸಂಸದರು ಕೇಂದ್ರ ಸರ್ಕಾರ ಈವರೆಗೂ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಜನರ ಬಳಿ ಕೊಂಡೊಯ್ಯುವಂತೆ ಸೂಚಿಸಿದ್ದಾರೆ.

ಮಹದಾಯಿ ಬಗ್ಗೆ ಚರ್ಚೆ:

ರಾಜ್ಯದಲ್ಲಿ ತೀವ್ರ ಸಮಸ್ಯೆಯನ್ನೊಡ್ಡಿರುವ ಉತ್ತರ ಕರ್ನಾಟಕ ಭಾಗಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಮಹದಾಯಿ ನದಿ ನೀರು ಹಂಚಿಕೆ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.   ಮಹದಾಯಿ ನದಿ ನೀರು ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಂದೆಡೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮಸ್ಯೆಯನ್ನು ನ್ಯಾಯಾಲಯದ ಹೊರಗೆ ಪರಿಹರಿಸಿಕೊಳ್ಳಲು ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಮನೋಹರ್ ಪರಿಕ್ಕರ್‍ಗೆ ಪತ್ರ ಬರೆದಿದ್ದಾರೆ.

ಆದರೆ ಪರಿಕ್ಕರ್ ಅವರು ನ್ಯಾಯಾಧೀಕರಣದ ಅಂತಿಮ ತೀರ್ಪು ಬ ರುವವರೆಗೂ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಮಸ್ಯೆ ಇತ್ಯರ್ಥವಾಗದಿದ್ದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ಕಾಂಗ್ರೆಸ್ ಇದನ್ನೇ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ವಿರುದ್ಧ ಅಪಪ್ರಚಾರ ನಡೆಸುವ ಸಂಭವವಿದೆ. ನಾವು ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸಂಸದರು ಪ್ರಧಾನಿ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.  ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ನರೇಂದ್ರ ಮೋದಿಯವರು ಮೌನವಾಗಿಯೇ ಕೇಳಿಸಿಕೊಂಡು ಸುಮ್ಮನಾದರು ಎಂದು ತಿಳಿದುಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin