ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಸಾಕ್ಷ್ಯ ನಾಶ ಸಾಬೀತು, ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

BJP--01]

ಬೆಂಗಳೂರು, ಆ.24- ಡಿವೈಎಸ್‍ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಲ ಸಾಕ್ಷಿಗಳನ್ನು ನಾಶಪಡಿಸಲಾಗಿದೆ ಎಂದು ವಿಧಿ-ವಿಜ್ಞಾನ ಪ್ರಯೋಗಾಲಯದಲ್ಲಿ ಬಹಿರಂಗಗೊಂಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದಿದ್ದರೆ ಕೇಂದ್ರಕ್ಕೆ ದೂರು ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ನಾವು ಮೊದಲಿನಿಂದಲೂ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದವು. ಇದೀಗ ಎಫ್‍ಎಸ್‍ಎಲ್ ವರದಿಯಲ್ಲಿ ಕೆಲವು ಪ್ರಭಾವಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಲಾಗಿದೆ ಎಂಬುದು ಬಹಿರಂಗವಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ದೂರಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಇದೇ 26ರಂದು ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ಅವರನ್ನು ಭೇಟಿ ಮಾಡಿ ದೂರು ನೀಡಲಾಗುವುದು. ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುವುದಾಗಿ ಹೇಳಿದರು. ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಮತ್ತು ಕೆಲ ಪೆÇಲೀಸ್ ಅಧಿಕಾರಿಗಳು ಷಡ್ಯಂತ್ರ ನಡೆಸಿರುವುದು ಬಹಿರಂಗಗೊಂಡಿದೆ. ಸಿಐಡಿ ತನಿಖೆ ಕೇವಲ ಕಣ್ಣೊರೆಸುವ ತಂತ್ರ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಮೊದಲು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಜನ ಬೀದಿಗೆಳೆಯಲಿದ್ದಾರೆ ಎಂದು ಎಚ್ಚರಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುರಿತ ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗಿದೆ. ಸರ್ಕಾರ ಮತ್ತು ಅಧಿಕಾರಿಗಳು ಶಾಮೀಲಾಗಿ ಇಡೀ ಪ್ರಕರಣವನ್ನೇ ಮುಚ್ಚಿ ಹಾಕಿದ್ದಾರೆ. ನೇರವಾಗಿ ಇದರಲ್ಲಿ ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಕೆಂಪಯ್ಯ ಹಾಗೂ ಪೊಲೀಸ್ ಅಧಿಕಾರಿಗಳು ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ ಎಂದು ಕಿಡಿಕಾರಿದರು. ವಿಶೇಷವಾಗಿ ಕೆಂಪಯ್ಯ ಸರ್ಕಾರವನ್ನು ರಕ್ಷಿಸಲು ಪ್ರಾರಂಭದಿಂದಲೇ ಮುಂದಾಗಿದ್ದರು. ತಮಗಿರುವ ಪ್ರಭಾವ ಬಳಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ. ತನಿಖೆ ವೇಳೆ ಕೊಠಡಿಯಲ್ಲಿ ಮೂರು ಗುಂಡು ಹಾರಿಸಿದ್ದರ ಬಗ್ಗೆ ಸಂದೇಹ ವ್ಯಕ್ತವಾಗಿದೆ.

ಸಿಐಡಿ ತನಿಖೆಯಲ್ಲಿ ಸಚಿವ ಜಾರ್ಜ್ ಪಾತ್ರ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದರು. ನನ್ನ ಸಾವಿಗೆ ಜಾರ್ಜ್ ಹಾಗೂ ಇಬ್ಬರು ಪೊಲೀಸರು ಕಾರಣ ಎಂದು ದೂರಿದ್ದರು. ಆದರೂ ಸರ್ಕಾರ ಸಿಐಡಿ ತನಿಖೆ ನಡೆಸಿ ಜಾರ್ಜ್‍ಗೆ ಕ್ಲೀನ್‍ಚಿಟ್ ನೀಡಿತ್ತು. ಇದೀಗ ಎಫ್‍ಎಸ್‍ಎಲ್ ವರದಿಯಲ್ಲಿ ಅನೇಕರ ಕೈವಾಡವಿರುವುದು ಬಹಿರಂಗಗೊಂಡಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಪುತ್ರನ ಕೈವಾಡದ ಬಗ್ಗೆ ಶಂಕೆಯಿದ್ದರೆ ತನಿಖೆ ನಡೆಸಲಿ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂಬುದಷ್ಟೆ ನಮ್ಮ ಕಳಕಳಿ ಎಂದರು.

ಎಸಿಬಿ, ಸಿಐಡಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಮತ್ತೆ ಋಜುವಾತಾಗಿದೆ. ಈ ಹಿಂದೆ ಆಡಳಿತ ನಡೆಸಿದ ಯಾವುದೇ ಮುಖ್ಯಮಂತ್ರಿಗಳು ಈ ರೀತಿ ಅಧಿಕಾರ ದುರುಪಯೋಗಪಡಿಸಿಕೊಂಡ ನಿದರ್ಶನಗಳಿರಲಿಲ್ಲ.  ಇತಿಹಾಸ ಸಿದ್ದರಾಮಯ್ಯನವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಮಾಡಿರುವ ಪಾಪಕ್ಕೆ ಮುಂದೊಂದು ದಿನ ಖಂಡಿತ ಫಲ ಅನುಭವಿಸಿಯೇ ತೀರುತ್ತಾರೆ ಎಂದು ಎಚ್ಚರಿಸಿದರು.

Facebook Comments

Sri Raghav

Admin