ದೆಹಲಿಯಲ್ಲಿ ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah--BJP--01

ಬೆಂಗಳೂರು, ಆ.26- ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಸಂಜೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ ಸದಾನಂದಾಗೌಡ, ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಸಹ ಉಸ್ತುವಾರಿ ಪಿಯೂಶ್ ಗೋಯಲ್, ಕೋರ್ ಕಮಿಟಿ ಸದಸ್ಯರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ, ಅಶೋಕ್ ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದ ಅಮಿತ್ ಷಾ, ಪಕ್ಷ ಸಂಘಟನೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ನಾಯಕರ ನಡುವೆ ಸಮನ್ವಯದ ಕೊರತೆ ಸೇರಿದಂತೆ ಕೆಲವು ಕಾರಣಗಳನ್ನು ಮುಂದಿಟ್ಟುಕೊಂಡು ತರಾಟೆಗೆ ತೆಗೆದುಕೊಂಡಿದ್ದರು. ಪಕ್ಷದ ರಾಜ್ಯ ನಾಯಕರಿಗೆ ಮತ್ತೂಂದು ಸುತ್ತಿನ ಬಿಸಿ ಮುಟ್ಟಲಿದೆ. ಇತ್ತೀಚೆಗೆ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ನಾಯಕರಿಗೆ ವಹಿಸಿರುವ ಕಾರ್ಯಭಾರಗಳು ಮತ್ತು ಅದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿದೆ.

ಸೆಪ್ಟೆಂಬರ್ ಅಂತ್ಯಕ್ಕೆ ಮತ್ತೆ ಅಮಿತ್ ಷಾ ರಾಜ್ಯಕ್ಕೆ ಬರಲಿದ್ದು, ಅಷ್ಟರೊಳಗೆ ಪಕ್ಷವನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಸಂಪೂರ್ಣ ಸಿದ್ಧಗೊಳಿಸುವ ಬಗ್ಗೆ ರೂಪಿಸಬೇಕಾದ ಕಾರ್ಯತಂತ್ರಗಳು, ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಅಮಿತ್ ಷಾ ಬೆಂಗಳೂರಿಗೆ ಬಂದು ಸರಣಿ ಸಭೆಗಳನ್ನು ನಡೆಸಿದ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ನಾಯಕರಿಗೆ ಕೆಲವು ಕಾರ್ಯಭಾರ ವಹಿಸಿದ್ದರು.

ಬಳಿಕ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಮತ್ತು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ ಮುಖಂಡರು, ಅಮಿತ್ ಷಾರವರ ನಿರ್ದೇಶನದಂತೆ ಪಕ್ಷ ಸಂಘಟನೆ ಕುರಿತು ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲ ವರದಿಗಳನ್ನು ಅಮಿತ್ ಷಾ ಅವರಿಗೆ ನೀಡಬೇಕಾಗಿದ್ದು, ಅದಕ್ಕಾಗಿ ದೆಹಲಿಯಲ್ಲಿ ಅವರ ನೇತೃತ್ವದಲ್ಲೇ ಕೋರ್ ಕಮಿಟಿ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ:

ಅಮಿತ್ ಷಾ ಈಗಾಗಲೇ ಪಕ್ಷದ ರಾಜ್ಯ ಘಟಕವನ್ನು ತಮ್ಮ ಹಿಡಿತಕ್ಕೆ ತೆಗೆದು ಕೊಂಡಿರುವುದರಿಂದ ಮುಂದಿನ ಎಲ್ಲಾ ತೀರ್ಮಾನಗಳು ಷಾ ಸಮ್ಮುಖದಲ್ಲೇ ಆಗಬೇಕಾಗಿದೆ. ಹಾಗಾಗಿ ಪಕ್ಷವನ್ನುಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು ಮತ್ತು ರಾಜ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟದ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಷಾ ಅವರ ಕಟ್ಟುನಿಟ್ಟಿನ ಸೂಚನೆ ಬಳಿಕ ಎಚ್ಚೆತ್ತ ಬಿಜೆಪಿ, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಆರಂಭಿಸುತ್ತಿದ್ದಂತೆ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಯಲ್ಲಿ ಡಿ ನೋಟಿಕೇಷನ್ ದೂರು ದಾಖಲಾಗಿರುವುದನ್ನೂ ಅಮಿತ್ ಷಾ ಅವರ ಗಮನಕ್ಕೆ ತರಲಾಗುವುದು ಎಂದು ಕೋರ್ ಕಮಿಟಿ ಸದಸ್ಯರೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin