‘ಅಡ್ಡ’ದಾರಿ ಹಿಡಿದ 7 ಜೆಡಿಎಸ್ ಶಾಸಕರ ವಿರುದ್ಧ ಪರ್ಯಾಯ ಅಭ್ಯರ್ಥಿಗಳು ಸಿದ್ದ

ಈ ಸುದ್ದಿಯನ್ನು ಶೇರ್ ಮಾಡಿ

Devegowda--01-JDS

ಬೆಂಗಳೂರು, ಆ.29-ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಏಳು ಶಾಸಕರ ಕ್ಷೇತ್ರದಲ್ಲಿ ಜೆಡಿಎಸ್ ಪರ್ಯಾಯ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದ್ದರೂ ಪ್ರಕಟಣೆ ಮಾಡುವುದನ್ನು ವರಿಷ್ಠರು ವಿಳಂಬ ಮಾಡುತ್ತಿದ್ದಾರೆ. ಬಂಡಾಯ ಶಾಸಕ ಜಮೀರ್ ಅಹಮ್ಮದ್ ಖಾನ್ ಕ್ಷೇತ್ರವಾದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಪೈಪೋಟಿ ಹೆಚ್ಚಾಗಿದೆ. ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ ಅವರ ಹೆಸರುಗಳು ಕೇಳಿ ಬಂದಿವೆ.

ಬಾವಾ ಕಳೆದ ಬಾರಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋತಿದ್ದರು. ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನು ಬಾವಾ ನಡೆಸಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕ್ಷೇತ್ರವಾದ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಶಿವರಾಜು ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಆದರೂ ಇನ್ನೂ ಈ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಬದಲಿಗೆ ಅದೇ ಕ್ಷೇತ್ರದ ಮಾಜಿ ಶಾಸಕ ಸುರೇಶ್‍ಗೌಡ ಅವರನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ.  ಜೆಡಿಎಸ್‍ಗೆ ಸೇರ್ಪಡೆಯಾಗುವಾಗಲೇ ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಹಾಗೂ ಸುರೇಶ್‍ಗೌಡ ಇಬ್ಬರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದರು. ಹೀಗಾಗಿ ಸುರೇಶ್‍ಗೌಡ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಬದಲಿಗೆ ರವೀಂದ್ರ ಶ್ರೀಕಂಠಯ್ಯ ಅವರನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ. ಇನ್ನು ಹಗರಿ ಬೊಮ್ಮನಹಳ್ಳಿ ವಿಧಾನಸಭಾಕ್ಷೇತ್ರದಲ್ಲಿ ಹಾಲಿ ಶಾಸಕ ಭೀಮಾನಾಯಕ್ ಬದಲಾಗಿ ಮತ್ತೊಬ್ಬ ಅದೇ ಹೆಸರಿನ ಅಕಾಂಕ್ಷಿಯೊಬ್ಬರ ಹೆಸರು ಮುಂಚೂಣಿಯಲ್ಲಿದ್ದು, ಅವರನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ವರಿಷ್ಠರು ತೀರ್ಮಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ಕ್ಷೇತ್ರದಲ್ಲೂ ಜೆಡಿಎಸ್ ಟಿಕೆಟ್‍ಗಾಗಿ ಪೈಪೋಟಿ ಏರ್ಪಟ್ಟಿದ್ದು, ಅಧಿಕೃತವಾಗಿ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದು ಕಾದುನೋಡಬೇಕು. ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಗೂ ಮುನ್ನವೇ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದರು. ಅವರಿಗೆ ಕಾರಣ ಕೇಳಿ ನೋಟೀಸ್ ಕೂಡ ನೀಡಲಾಗಿತ್ತು. ಹೀಗಾಗಿ ಈ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವರಿಷ್ಠರು ಉದ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin