ಒಂದನೇ ತರಗತಿಯಿಂದ ಪಿಜಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ‘ಶಿಕ್ಷಣ ಭಾಗ್ಯ’

ಈ ಸುದ್ದಿಯನ್ನು ಶೇರ್ ಮಾಡಿ

Free-Educvation--01

ಬೆಂಗಳೂರು, ಸೆ.2- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮತದಾರರ ಮೂಗಿಗೆ ತುಪ್ಪ ಸವರಲು ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಹೆಣ್ಣು ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುವ ಶಿಕ್ಷಣ ಭಾಗ್ಯ ಯೋಜನೆಯನ್ನು ಜಾರಿ ಮಾಡಲು ತೀರ್ಮಾನಿಸಿದೆ. ಸರ್ಕಾರದ ನೂತನ ಈ ಯೋಜನೆ ಪ್ರಕಾರ ಒಂದರಿಂದ ಸ್ನಾತಕೋತ್ತರ ಪದವಿವರೆಗೂ ಹೆಣ್ಣು ಮಕ್ಕಳಿಗೆ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಮುಂದಿನ ಅಧಿವೇಶದನಲ್ಲಿ ಹಾಲಿ ಇರುವ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ಮಾಡಿ 2019ರ ಜೂನ್ ತಿಂಗಳಿನಿಂದ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದರಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಪಿಯುಸಿ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿತ್ತು.  ಇದೀಗ ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಉಚಿತ ಶಿಕ್ಷಣ ನೀಡುವ ಮೂಲಕ ಮಹಿಳೆಯರ ಮನಗೆಲ್ಲಲ್ಲು ಸರ್ಕಾರ ಕಸರತ್ತು ನಡೆಸುತ್ತಿದೆ. ಸರ್ಕಾರದ ಈ ಯೋಜನೆಯಿಂದ ರಾಜ್ಯದ ಸುಮಾರು 18ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯಲಿದ್ದಾರೆ.

ಈಗಾಗಲೇ ನೆರೆಯ ತೆಲಂಗಾಣ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಎಲ್‍ಕೆಜಿಯಿಂದ ಸ್ನಾತಕೋತ್ತರ ಪದವಿವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ. ಇತ್ತೀಚೆಗಷ್ಟೆ ಪಂಜಾಬ್ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಪಿಎಚ್‍ಡಿ ವರೆಗೂ ಉಚಿತ ಶಿಕ್ಷಣ ನೀಡುವ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಈ ಎರಡು ರಾಜ್ಯಗಳ ಮಾದರಿಯನ್ನು ಅನುಸರಿಸಲು ಮುಂದಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ವಾರ್ಷಿಕ ಶುಲ್ಕವನ್ನು ಭರಿಸಬೇಕು. ಬಳಿಕ ಸರ್ಕಾರ ಇದನ್ನು ಬ್ಯಾಂಕ್ ಖಾತೆಗಳ ಮೂಲಕ ಹಿಂದಿರುಗಿಸಲಿದೆ.

ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪ್ರಥಮ ದರ್ಜೆ ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಹೆಣ್ಣುಮಕ್ಕಳಿಗೆ ಕಡ್ಡಾಯವಾಗಿ ಉಚಿತ ಶಿಕ್ಷಣ ನೀಡಲು ಸೂಚನೆ ನೀಡಲಾಗುವುದು. ಅವರ ವಾರ್ಷಿಕ ಶುಲ್ಕವನ್ನು ನಾವೇ ಭರಿಸುತ್ತೇವೆ. ಸುಮಾರು ವಾರ್ಷಿಕ 120ರಿಂದ 150 ಕೋಟಿ ರೂ. ಸರ್ಕಾರಕ್ಕೆ ಹೊರೆಯಾಗಬಹುದು. ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಇಂತದ್ದೊಂದು ದಿಟ್ಟ ಕ್ರಮ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಹೇಳಿದ್ದಾರೆ.

Facebook Comments

Sri Raghav

Admin