3ನೆ ದಿನಕ್ಕೆ ಕಾಲಿಟ್ಟ ಮೇಲ್ಮನೆ ಸದಸ್ಯರ ಧರಣಿ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Parishat

ಬೆಂಗಳೂರು, ಸೆ.8-ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ವಿಧಾನಪರಿಷತ್ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಕಳೆದ ಬುಧವಾರದಿಂದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಪಕ್ಷಾತೀತವಾಗಿ ಧರಣಿ ನಡೆಸುತ್ತಿದ್ದಾರೆ. ವಿಧಾನಪರಿಷತ್‍ನ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಸಚಿವ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸದಸ್ಯರಾದ ಅರುಣ್ ಶಹಾಪುರ್, ರಮೇಶ್‍ಬಾಬು, ಸೇರಿದಂತೆ 13 ಮಂದಿ ಧರಣಿಯಲ್ಲಿ ನಿರತರಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ ಹಾಗೂ ವಿಶ್ವವಿದ್ಯಾಲಯಗಳ ವ್ಯಾಪ್ತಿಗೆ ಸಮಸ್ಯೆಗಳಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸುವ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಧರಣಿ ನಿರತ ವಿಧಾನಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.

ರಾಜ್ಯಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲ. ಒಂದು ಇಲಾಖೆಗೆ ಸೀಮಿತವಾದ ಸಮಸ್ಯೆಯಲ್ಲ. ಆದರೂ ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ರಾಜ್ಯದ ಇತಿಹಾಸದಲ್ಲೇ ವಿಧಾನಪರಿಷತ್ ಸದಸ್ಯರು ಪಕ್ಷಾತೀತವಾಗಿ ಧರಣಿ ನಡೆಸುತ್ತಿದ್ದರೂ, ಸರ್ಕಾರ ಮಾತುಕತೆ ನಡೆಸುವ ಕನಿಷ್ಠ ಸೌಜನ್ಯವನ್ನಾದರೂ ತೋರಿಲ್ಲ ಎಂದು ವಿಧಾನಪರಿಷತ್ ಸದಸ್ಯ ರಮೇಶ್‍ಬಾಬು ಟೀಕಿಸಿದರು. ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸೆ.13ರವರೆಗೂ ಕಾಲಾವಕಾಶ ನೀಡಲಾಗಿದೆ. ಅಲ್ಲಿಯವರೆಗೆ ಸತ್ಯಾಗ್ರಹ ನಿಲ್ಲುವುದಿಲ್ಲ. ಅಷ್ಟರಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಸೆ.14ರಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಅವರು ತಿಳಿಸಿದರು.

Facebook Comments

Sri Raghav

Admin