ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ ಸಾಧ್ಯತೆ

Rain--01

ಬೆಂಗಳೂರು,ಸೆ.17-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಧಿಕ ಮಳೆಯಾಗುತ್ತಿದೆ.  ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದ ಇನ್ನು ಮೂರು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು , ಚೆನ್ನೈ ಕರಾವಳಿಯಿಂದ ಮೇಲ್ಭಾಗದಲ್ಲಿರುವ ಆಂಧ್ರದ ಕರಾವಳಿ ತೀರದ ಕಡೆಗೆ ಸಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬೀದರ್, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದರು.  ಆದರೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಲಕ್ಷಣ ಇಲ್ಲ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು , ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin