22ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Anganawadi--X1

ಬೆಂಗಳೂರು,ಸೆ.18-ಮಾತೃಪೂರ್ಣ ಯೋಜನೆ ಜಾರಿ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೇಲೆ ಒತ್ತಡ ಹೇರಿರುವುದನ್ನು ಖಂಡಿಸಿ ಸೆ.22ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಅಧ್ಯಕ್ಷ ಜಿ.ಆರ್.ಶಿವಶಂಕರ್ ತಿಳಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ 30 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಾತೃಪೂರ್ಣ ಯೋಜನೆ ಅನುಷ್ಠಾನಗೊಳಿಸುವುದಾಗಿ ಘೋಷಿಸಿರುವುದು ಚುನಾವಣೆ ಗಿಮಿಕ್ ಹೊರತು ಫಲಾನುಭವಿಗಳ ಹಿತದೃಷ್ಟಿಯಿಂದಲ್ಲ ಎಂದು ದೂರಿದರು.

ನಗರದ ಇಂದಿರಾ ಕ್ಯಾಂಟೀನ್‍ಗಳು ಉಪಯುಕ್ತವಾಗಿವೆ. ಆದರೆ ಇಂದು ಮಾತೃಪೂರ್ಣ ಯೋಜನೆಯಲ್ಲಿ ಬರುವ ಗರ್ಭಿಣಿ ಹಾಗೂ ಬಾಣಂತಿಯರ ಸೂಕ್ಷ್ಮತೆಯನ್ನು ಅರಿತು ಅದರ ಬಗ್ಗೆ ಹೆಚ್ಚಿನ ಜವಾಬ್ದಾರಿ ಅರಿತು ಜಾರಿ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಏಕಪಕ್ಷೀಯ ಧೋರಣೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಒಟ್ಟು 61,187 ಅಂಗನವಾಡಿ ಕೇಂದ್ರಗಳಿವೆ. ಅವುಗಳಲ್ಲಿ ಕೇವಲ 34957 ಸ್ವಂತ ಕಟ್ಟಡಗಳನ್ನು ಹೊಂದಿವೆ. 26 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾದ ವ್ಯವಸ್ಥೆ ಇಲ್ಲ. ಇನ್ನುಳಿದ ಕೇಂದ್ರಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಈ ಮೊದಲು ಇದ್ದ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಕೇಂದ್ರದ ಕೆಲಸದ ವೇಳೆಯನ್ನು ಸಂಜೆ 4ಗಂಟೆಗೆ ವಿಸ್ತರಿಸಲಾಗಿದೆ. ಇದರಿಂದ ಕೆಲಸದ ಒತ್ತಡ ಹೆಚ್ಚಾಗಿದೆ ಎಂದರು.

Facebook Comments

Sri Raghav

Admin