ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ : ಟಿಬಿಜೆ

ಈ ಸುದ್ದಿಯನ್ನು ಶೇರ್ ಮಾಡಿ

TB-Jayachandra

ತುಮಕೂರು, ಅ.2-ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗುವುದರಲ್ಲಿ ಸಂದೇಹವೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷ ಪೂರೈಸಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನಮ್ಮದು ಬಡವರ ಪರ ಸರ್ಕಾರವಾಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ನಾವು ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ನಾಲ್ಕೂವರೆ ವರ್ಷಗಳಿಂದ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಸಿದ್ದರಾಮಯ್ಯ ನೀಡಿದ್ದಾರೆ. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಹಾಗಾಗಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದ ಅವರು, ಸಿದ್ದರಾಮಯ್ಯನವರು ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಪ್ರತಿಯೊಂದನ್ನೂ ಎದುರಿಸಲಿದ್ದೇವೆ. ನೂತನವಾಗಿ ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇದು ಮಹಿಳೆಯರಿಗೆ ಮಹತ್ವದ ಯೋಜನೆಯಾಗಲಿದೆ ಎಂದು ತಿಳಿಸಿದರು.

ಗರ್ಭಿಣಿಯರಿಗೆ ಅಂಗನವಾಡಿ ಮೂಲಕ ಪೌಷ್ಠಿಕ ಆಹಾರ ನೀಡುವುದು, ಬಾಣಂತಿಯರು, ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವ ಮಹತ್ವದ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅವರು ಜಾರಿಗೆ ತರಲು ಹೊರಟಾಗ ಇಡೀ ಸಚಿವ ಸಂಪುಟ ಒಮ್ಮತದ ಸಹಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ಈ ಮಹತ್ವದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು. ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿ ರಾತ್ರೋ ರಾತ್ರಿ ಬೃಹತ್ ಮರಗಳ ಮಾರಣಹೋಮ ನಡೆದಿರುವ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು. ಸಂಸದ ಪಿ.ಸಿ.ಮುದ್ದಹನುಮೇಗೌಡ, ಶಾಸಕ ಡಾ.ರಫಿಕ್ ಅಹಮ್ಮದ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆಟೋರಾಜು ಮತ್ತಿತರರು ಇದ್ದರು.

Facebook Comments

Sri Raghav

Admin