ಕಾಂಗ್ರೆಸ್ ಹೈಕಮಾಂಡ್ ಚುನಾವಣಾ ನಾಯಕತ್ವದ ಗೊಂದಲ ಬಗೆಹರಿಸಬೇಕು

ಈ ಸುದ್ದಿಯನ್ನು ಶೇರ್ ಮಾಡಿ

Anand-Kumar--01

ಬೆಂಗಳೂರು,ಅ.5-ಯಾರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಸಲಿದೆ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್‍ಕುಮಾರ್ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹುಣಸೂರು ತಾಲ್ಲೂಕಿನ ಕುರುಬ ಸಮಾಜದ ಸಮಾರಂಭದಲ್ಲಿ ಈ ಬಾರಿ ನನ್ನ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕೆಂದು ಹೈಕಮಾಂಡ್ ಪತ್ರ ಕಳುಹಿಸಿದೆ ಎಂದು ತಿಳಿಸಿದ್ದಾರೆ.   ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ ಅವರು ನಾನು ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ. ಕೆಳಹಂತದ ನಾಯಕರಲ್ಲಿ ಈ ಬಗ್ಗೆ ಗೊಂದಲ ಉಂಟಾಗಿದೆ. ಯಾರ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಆಗಿರುವುದರಿಂದ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುವುದು ಸಹಜ. ಸಾಮೂಹಿಕ ನಾಯಕತ್ವದ ಮೇಲೆ ನಮ್ಮ ಪಕ್ಷ ನಂಬಿಕೆ ಇಟ್ಟುಕೊಂಡಿದೆ. ಮೊದಲೇ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವುದಿಲ್ಲ. ಚುನಾವಣೆ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನದೇ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದು ಹೇಳಿಕೆ ನೀಡಿರುವುದು ಹಾಲಿ ಅಧ್ಯಕ್ಷರಾಗಿರುವ ಡಾ.ಜಿ.ಪರಮೇಶ್ವರ್ ಅವರನ್ನು ತೇಜೋವಧೆ ಮಾಡುವ ಪ್ರಯತ್ನವೇ ಎಂಬ ಅನುಮಾನ ಮೂಡಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ತತ್ವ ಸಿದ್ದಾಂತಕ್ಕೆ ಬದ್ದವಾಗಿರುವ ಪಕ್ಷ. ಅಧಿಕಾರಕ್ಕಿಂತ ಶಿಷ್ಟಾಚಾರಕ್ಕೆ ಹೆಚ್ಚು ಆದ್ಯತೆ ನೀಡಿದೆ. ಶಿಷ್ಟಾಚಾರದ ಪ್ರಕಾರವೇ ಎಲ್ಲಾ ನಡೆಯಬೇಕು. ಅನಗತ್ಯವಾಗಿ ಕಾಂಗ್ರೆಸ್ ನಾಯಕರಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಬಾರದು, ದಿನೇ ದಿನೇ ನಾಯಕರುಗಳ ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಪಕ್ಷದ ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಬಾರದು. ಈ ಬಗ್ಗೆ ಹೈಕಮಾಂಡ್ ಮಧ್ಯಪ್ರವೇಶಿಸಿ ಪರಿಹಾರ ಸೂಚಿಸಬೇಕು ಎಂದು ಹೇಳಿದರು.
ಮಹಾತ್ಮ ಗಾಂಧಿ ಅವರ ಕಾಲದಿಂದಲೂ ಇಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ ಸಿದ್ದಾಂತಗಳನ್ನು ಪಾಲಿಸಿಕೊಂಡು ಬಂದಿದೆ ಮತ್ತು ಅದಕ್ಕೆ ಬದ್ಧವಾಗಿ ನಡೆದುಕೊಂಡಿದೆ. ಮುಂದೆಯೂ ಹಾಗೆಯೇ ನಡೆದುಕೊಳ್ಳತ್ತದೆ ಎಂಬ ವಿಶ್ವಾಸವಿದೆ. ಇಲ್ಲಿ ನಾನು ಎಂಬುದಕ್ಕಿಂತ ನಾವು ಎಂಬುದು ಮುಖ್ಯವಾಗುತ್ತದೆ ಎಂದು ಅವರು ಸೂಚ್ಯವಾಗಿ ಹೇಳಿದ್ದಾರೆ.

Facebook Comments

Sri Raghav

Admin