ಮೋದಿ ಅವರದು ಬಾಯಿ ಬಡಾಯಿ, ಸಾಧನೆ ಶೂನ್ಯ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಅ.6- ಪ್ರಧಾನಿ ಮೋದಿ ಅವರದು ಬಾಯಿ ಬಡಾಯಿ, ಸಾಧನೆ ಶೂನ್ಯ. ಆದರೆ, ನಾವು ಸುಳ್ಳು ಹೇಳುವ ಅಗತ್ಯವಿಲ್ಲ. ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿದರೆ ಸಾಕು. ಮುಂದಿನ ಚುನಾವಣೆಯಲ್ಲಿ ಪಕ್ಷ ತಪ್ಪದೇ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ತುರ್ತಾಗಿ ಆಗಬೇಕಿರುವ ಕೆಲಸ. ಈ ಚುನಾವಣಾ ವರ್ಷದಲ್ಲಿ ನಾವು ಮೈ ಮರೆಯಬಾರದು. ನಾವು ಜನರಿಗೆ ಸುಳ್ಳು ಹೇಳಬೇಕಿಲ್ಲ. ನಮ್ಮ ಸರ್ಕಾರದ ಸಾಧನೆಗಳು ಕಣ್ಣಮುಂದಿವೆ. ಅವುಗಳನ್ನು ವಿವರಿಸಿದರೆ ಸಾಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಯಾವ ಸಾಧನೆಯನ್ನೂ ಮಾಡಿಲ್ಲ. ಹಗ್ಗದ ಪ್ರಚಾರ ಪಡೆದುಕೊಳ್ಳುತ್ತಿದೆ. ಅದನ್ನು ಜನರಿಗೆ ವಿವರಿಸಬೇಕು ಎಂದರು.

ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮನೆ ಮನೆಗೆ ಹೋಗಿ ಈ ಕೆಲಸ ಮಾಡಬೇಕು. ಕೆಲವು ಶಾಸಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿಲ್ಲ ಎಂಬ ಮಾಹಿತಿ ಇದೆ. ಇನ್ನು ಮುಂದೆ ಆ ರೀತಿ ಮಾಡಬೇಡಿ. ಎಲ್ಲಾ ಶಾಸಕರು ಮನೆ ಮನÉಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ಎಂದು ತಾಕೀತು ಮಾಡಿದರು. ಪ್ರತೀ ಬೂತ್‍ಗೆ ಕನಿಷ್ಠ 13 ಮಂದಿ ಏಜೆಂಟರನ್ನು ನೇಮಿಸುವ ಪ್ರಕ್ರಿಯೆ ಆರಂಭವಾಗಿದೆ. ಕಾರ್ಯಕರ್ತರು ಉತ್ಸಾಹ ಹೆಚ್ಚಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಮನೆ ಮನೆಗೆ ಕಾಂಗ್ರೆಸ್ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಹೇಳಿದರು.

ಪಕ್ಷದಲ್ಲಿರುವ ಆಂತರಿಕ ಭಿನ್ನಮತಗಳ ಬಗ್ಗೆ ಈಗಾಗಲೇ ಮೂರ್ನಾಲ್ಕು ಬಾರಿ ಚರ್ಚೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎಂದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದೆ. ಜನರು ಖುಷಿಯಾಗಿದ್ದಾರೆ. ಸರ್ಕಾರದ ಕಾರ್ಯಕ್ರಮ ಎಲ್ಲೆ ನಡೆದರೂ ಜನರು ಭಾಗವಹಿಸುತ್ತಾರೆ. ಅದರ ಅರ್ಥ ಜನರಿಗೆ ಸಮಾಧಾನ ತಂದಿದೆ. ನಮ್ಮ ಮೇಲೆ ಪ್ರೀತಿ ಬಂದಿದೆ ಎಂದು ಭಾವಿಸಬಹುದು. ಸದ್ಯದ ವಾತಾವರಣ ನೋಡಿದರೆ ಯಾರು ಏನೇ ಹೇಳಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು 100ಕ್ಕೂ 200ರಷ್ಟು ಖಚಿತ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಾತಾವರಣವನ್ನು ಒಟ್ಟಾಗಿ ಜವಾಬ್ದಾರಿಯುತವಾಗಿ ನೋಡಿಕೊಳ್ಳೋಣ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ ಎಂದು ಶಾಸಕರನ್ನು ಉರುದಿಂಬಿಸಿದರು.
ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಅವರು ಉಸ್ತುವಾರಿ ಆಗಿ ನೇಮಕವಾದ ನಂತರ ರಾಜ್ಯ ಕಾಂಗ್ರೆಸ್‍ನ ಎಲ್ಲಾ ಶಾಸಕರನ್ನು ಒಮ್ಮಲೆ ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳುತ್ತಿದ್ದರು. ಆಗಾಗಿ ಈ ವಿಶೇಷ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾರ್ಯಾಧ್ಯಕ್ಷರಾದ ದಿನೇಶ್‍ಗುಂಡೂರಾವ್, ಎಸ್.ಆರ್.ಪಾಟೀಲ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಮಾಜಿ ಸಚಿವ ಖಮರುಲ್ಲಾ ಇಸ್ಲಾಂ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಒಂದು ನಿಮಿಷ ಮೌನ ಆಚರಿಸಲಾಯಿತು.  ವಿಧಾನಪರಿಷತ್‍ಗೆ ನೂತನವಾಗಿ ಆಯ್ಕೆಯಾಗಿರುವ ಸಿ.ಎಂ.ಇಬ್ರಾಹಿಂ, ನೂತನ ಸಚಿವರಾದ ಎಚ್.ಎಂ.ರೇವಣ್ಣ, ಗೀತಾ ಮಹದೇವಪ್ರಸಾದ್, ಆರ್.ಬಿ.ತಿಮ್ಮಾಪುರ್ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.

Facebook Comments

Sri Raghav

Admin