ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ 9 ವಿಧೇಯಕಗಳು

ಈ ಸುದ್ದಿಯನ್ನು ಶೇರ್ ಮಾಡಿ

Suvarna-Soudha

ಬೆಳಗಾವಿ, ನ.12-ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಸೇರಿದಂತೆ 9 ವಿಧೇಯಕಗಳು ಈ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ ಅವರು ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಬೇಕೆಂಬ ಖಾಸಗಿ ವಿಧೇಯಕ ಮಂಡಿಸುವ ಪ್ರಸ್ತಾಪ ಮಾಡಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಅವರು ಖಾಸಗಿ ವಿಧೇಯಕ ಮಂಡನೆ ಮಾಡಲು ಉದ್ದೇಶಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದ್ದು, ಈ ಬಾರಿ ಮಹತ್ವದ ವಿಧೇಯಕಗಳು ಮಂಡನೆಯಾಗಿ ಚರ್ಚೆಗೆ ಬರಲಿವೆ ಎಂದು ಹೇಳಿದರು.
ಅಮಾನವೀಯ ದುಷ್ಟ ಪದ್ಧತಿಗಳು ಹಾಗೂ ವಾಮಾಚಾರ ಪ್ರತಿಬಂಧ ಮತ್ತು ನಿರ್ಮೂಲನೆ ವಿಧೇಯಕ, ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕ, ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಒಟ್ಟು 9 ವಿಧೇಯಕಗಳು ಮಂಡನೆಯಾಗಿ ಚರ್ಚೆಗೆ ಬರಲಿವೆ ಎಂದು ಹೇಳಿದರು.

Facebook Comments

Sri Raghav

Admin