ಜಾರ್ಜ್-ವಿನಯ್ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

bjp
ಬೆಂಗಳೂರು,ನ.30-ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮತ್ತು ಜಿಲ್ಲಾಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ವಿನಯ್ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಿನ್ನೆ   ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಉಪನಾಯಕ ಆರ್. ಅಶೋಕ್, ಮಾಜಿ ಸಚಿವ ಸುರೇಶ್‍ಕುಮಾರ್ ಸೇರಿದಂತೆ ಶಾಸಕರು ಹಾಗೂ ಬಿಬಿಎಂಪಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರ ಉದ್ದೇಶಪೂರ್ವಕವಾಗಿ ಸಚಿವರನ್ನು ರಕ್ಷಣೆ ಮಾಡಲು ಈ ಎರಡೂ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ತಲೆ ಕಾಯಲು ಮುಂದಾಗಿರುವುದರಿಂದ ಎರಡೂ ಪ್ರಕರಣಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾನಿರತರು ಅನುಮಾನ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಧಾಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಕೆ.ಜೆ. ಜಾರ್ಜ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿತ್ತು. ಸರ್ಕಾರ ಭಂಡತನಕ್ಕೆ ಬಿದ್ದು ಅವರನ್ನು ಸಂಪುಟದಲ್ಲಿ ಉಳಿಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಯಾವುದೇ ರೀತಿಯ ಸಾಕ್ಷ್ಯಾಧಾರಗಳನ್ನು ಹಾಗೂ ಹೇಳಿಕೆ ನೀಡದಂತೆ ಜಾರ್ಜ್ ಅಧಿಕಾರಿ ಗಳು ಮತ್ತು ಗಣಪತಿ ಕುಟುಂಬಸ್ಥರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೇಗಾದರೂ ಮಾಡಿ ಸರ್ಕಾರ ಈ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚು ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ್ ಕುಲಕರ್ಣಿ ಡಿವೈಎಸ್ಪಿ ಮೂಲಕ ಸಂಧಾನ ನಡೆಸಿರುವುದು ಸಾಬೀತಾಗಿದೆ. ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಕೂಡ ಧಾರವಾಡಕ್ಕೆ ಹೋಗಿ ಬರಿಗೈಯಲ್ಲಿ ಬಂದಿದ್ದಾರೆ.

ವಕೀಲರಿಗೆ ಕುಲಕರ್ಣಿ ನನ್ನ ವಿರುದ್ದ ಹೇಳಿಕೆ ನೀಡಬಾರದೆಂದು ಫೋನ್ ಮೂಲಕ ಧಮ್ಕಿ ಹಾಕುತ್ತಾರೆ. ಸರ್ಕಾರ ಈ ಎರಡೂ ಪ್ರಕರಣ ಗಳನ್ನು ಹೇಗಾದರೂ ಮಾಡಿ ಮುಚ್ಚಿ ಹಾಕುವ ಪ್ರಯತ್ನ ನಡೆಸಿದೆ ಎಂದು ಆಪಾದಿಸಿದರು.ಮುಖಂಡ ಆರ್.ಅಶೋಕ್ ಮಾತನಾಡಿ, ಸರ್ಕಾರ ಅನೇಕ ಭಾಗ್ಯಗಳನ್ನು ಜಾರಿ ಮಾಡಿದ್ದು , ಕೊಲೆ ಆರೋಪದಲ್ಲಿ ಭಾಗಿಯಾಗಿರುವ ಸಚಿವರ ರಕ್ಷಣೆ ಮಾಡುವುದರ ಮೂಲಕ ಕ್ಲೀನ್‍ಚಿಟ್ ಭಾಗ್ಯ ಯೋಜನೆ ಪ್ರಾರಂಭಿಸಲು ಮುಂದಾಗಿದೆ ಎಂದು ವ್ಯಂಗ್ಯವಾಡಿದರು.  ಜಾಜ್ ಮತ್ತು ವಿನಯ್ ಕುಲಕರ್ಣಿ ರಾಜೀ ನಾಮೆ ನೀಡುವವರೆಗೂ ಹೋರಾಟ ಮುಂದು ವರೆಯಲಿದೆ. ಒಂದು ವೇಳೆ ಸಂಪುಟದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.  ಶಾಸಕರಾದ ಮುನಿರಾಜು, ವಿಜಯ ಕುಮಾರ್, ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸೇರಿದಂತೆ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

Facebook Comments