ಕೋಮು ಗಲಭೆಗಳನ್ನು ತಡೆಯಲು ಕಾಂಗ್ರೆಸ್ ಸಭೆಯಲ್ಲಿ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Congress-01

ಬೆಂಗಳೂರು, ಡಿ.7- ಚುನಾವಣೆ ಸಂದರ್ಭದಲ್ಲಿ ಸಂಭಾವ್ಯ ಕೋಮು ಗಲಭೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜೀವ ಮತ್ತು ಜೀವನ ಎಂಬ ಬಗ್ಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಬಗ್ಗೆ ನಿನ್ನೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ನಡೆದಿದೆ. ಕೋಮು ಸಂಘರ್ಷ ಉಂಟುಮಾಡಿ ರಾಜಕೀಯ ಲಾಭ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಪಕ್ಷಗಳ ಚಟುವಟಿಕೆಗಳನ್ನು ತಡೆಗಟ್ಟಲು ಪಕ್ಷದ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಲು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ ಘಟಕಗಳು ಮತ್ತು ಬ್ಲಾಕ್ ಕಾಂಗ್ರೆಸ್ ಹಾಗೂ ಪಂಚಾಯತ್ ಮಟ್ಟದಲ್ಲಿ ಜೀವ ಮತ್ತು ಜೀವನ ಎಂಬ ಕಾರ್ಯಕ್ರಮ ಆಯೋಜಿಸಬೇಕು ಎಂಬ ಬಗ್ಗೆ ಮಾತುಕತೆ ನಡೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಕರ್ನಾಟಕದಲ್ಲಿ ಉಗ್ರ ಹೋರಾಟ ಮಾಡಲು ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಗಲಭೆಯಾಗುವ ಮುನ್ಸೂಚನೆ ಇರುವುದರಿಂದ ಜನರಲ್ಲಿ ಜೀವ ಮತ್ತು ಜೀವನದ ಬಗ್ಗೆ ಅರಿವು ಮೂಡಿಸುವ ಸಂಬಂಧ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಜನರ ಆಸ್ತಿ-ಪಾಸ್ತಿ ಹಾಳಾಗದಿರಲು ಅಮಾಯಕರ ಜೀವ ರಕ್ಷಣೆ ಮಾಡುವ ಸಂಬಂಧ ಜೀವ ಮತ್ತು ಜೀವನ ಎಂಬ ಧ್ಯೇಯವಾಕ್ಯದೊಂದಿಗೆ ಬೆಳಗ್ಗೆ ಅರಿವು ಕಾರ್ಯಕ್ರಮ, ರಾತ್ರಿ ಮೇಣದ ಬತ್ತಿಯೊಂದಿಗೆ ಮೆರವಣಿಗೆ ಮಾಡಿ ಜನರಲ್ಲಿ ಶಾಂತಿ ಕಾಪಾಡುವ ಕಾರ್ಯಕ್ರಮ ಮಾಡಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ದಕ್ಷಿಣ ಕನ್ನಡ, ಹುಣಸೂರು, ಉತ್ತರ ಕರ್ನಾಟಕ ಮುಂತಾದೆಡೆ ಹಲವು ಘಟನೆಗಳ ಹಿನ್ನೆಲೆಯಲ್ಲಿ ಕೋಮು ಸಂಘರ್ಷಗಳನ್ನು ಉಂಟುಮಾಡುವ ಪ್ರಯತ್ನ ನಡೆದಿತ್ತು. ಇಂತಹ ಘಟನೆಗಳನ್ನು ತಡೆಗಟ್ಟಲು ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಹಾಗಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಸೂಚಿಸಲಾಗಿದೆ. ಪಕ್ಷದ ಹಿರಿಯ ಮುಖಂಡರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.  ರಾಜ್ಯದ ಪಕ್ಷ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಈ ಬಗ್ಗೆ ಪಕ್ಷದ ಹಿರಿಯ ಮುಖಂಡರು ಕೂಡ ನಿನ್ನೆ ಚರ್ಚೆ ನಡೆಸಿದ್ದಾರೆ.

Facebook Comments

Sri Raghav

Admin