ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ : 2ನೇ ಹಂತದ ಪರಿವರ್ತನಾ ರಥಯಾತ್ರೆಗೆ ಪ್ಲಾನ್

ಈ ಸುದ್ದಿಯನ್ನು ಶೇರ್ ಮಾಡಿ

bjp

ಬೆಂಗಳೂರು, ಡಿ.9- ಎರಡನೇ ಹಂತದ ನವ ಕರ್ನಾಟಕ ಪರಿವರ್ತನಾ ರಥಯಾತ್ರೆ, ಪಕ್ಷದಲ್ಲಿ ಉಂಟಾಗಿರುವ ಸಣ್ಣಪುಟ್ಟ ಗೊಂದಲ ನಿವಾರಣೆ, ಪಕ್ಷ ಸಂಘಟನೆ, ರಾಜ್ಯ ಸರ್ಕಾರದ ವಿರುದ್ದ ಹೋರಾಟ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲು ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದೆ. ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಈ ಸಭೆಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೋರ್ ಕಮಿಟಿ ಸದಸ್ಯರಾದ ಅನಂತ್‍ಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಣಜಿಣಗಿ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ , ಆರ್.ಅಶೋಕ್, ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಪ್ರಮುಖವಾಗಿ ಮೊದಲ ಹಂತದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಸಾರ್ವಜನಿಕರಿಂದ ವ್ಯಕ್ತವಾಗಿರುವ ಅಭಿಪ್ರಾಯಗಳು, 2ನೇ ಹಂತದ ಯಾತ್ರೆಯನ್ನು ಯಶಸ್ವಿಗೊಳಿಸುವುದು, ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ನಡೆಸಲು ಉದ್ದೇಶಿಸಿರುವ ಸಮಾವೇಶಗಳನ್ನು ಯಶಸ್ವಿಗೊಳಿಸಲು ಸಭೆಯಲ್ಲಿ ಪ್ರಮುಖ ಚರ್ಚೆ ನಡೆಯಲಿದೆ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣವನ್ನು ಡಿವೈಎಸ್ಪಿ ಮೂಲಕ ಸಂಧಾನ ನಡೆಸಲು ಯತ್ನಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ರಾಜೀನಾಮೆ ಸೇರಿದಂತೆ ರಾಜ್ಯ ಸರ್ಕಾರದ ಭ್ರಷ್ಟಾಚಾರಗಳನ್ನು ಜನರ ಬಳಿ ಕೊಂಡೊಯ್ಯಲು ಚರ್ಚೆ ನಡೆಯಲಿದೆ.

ಮುಂದಿನ ಹಂತದಲ್ಲಿ ನಡೆಯಲಿರುವ ಪರಿವರ್ತನಾ ರಥಯಾತ್ರೆಯನ್ನು ಯಶಸ್ವಿಗೊಳಿಸಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಕೊಂಡೊಯ್ಯುವುದು, ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಿ ಸರ್ಕಾರದ ವಿರುದ್ಧ ಹೋರಾಟ ಕುರಿತು ಪ್ರಮುಖರು ಚರ್ಚೆ ನಡೆಸಲಿದ್ದಾರೆ. ಬಹುದಿನಗಳ ನಂತರ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು , ಇನ್ನು ಮುಂದೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡದಂತೆ ಎಲ್ಲ ನಾಯಕರಿಗೂ ತಾಕೀತು ಮಾಡಲಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೈಸೂರಿನ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನಾವೀಸ್ ಹಾಗೂ ಬೆಂಗಳೂರಿನ ವಿಭಾಗವಾರು ನಡೆಯಲಿರುವ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕರೆಸಲು ಸಭೆ ತೀರ್ಮಾನಿಸಲಿದೆ. ಜನವರಿ 28ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಅಂದಿನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಪಾಲ್ಗೊಳ್ಳಲಿರುವ ಈ ಸಮಾವೇಶಕ್ಕೆ ಒಟ್ಟು 5 ಲಕ್ಷ ಕಾರ್ಯಕರ್ತರನ್ನು ಸೇರಿಸಿ ವಿಧಾನಸಭೆಗೆ ಅಂದೇ ಬಿಜೆಪಿ ರಣ ಕಹಳೆ ಮೊಳಗಿಸಲಿದೆ.

Facebook Comments

Sri Raghav

Admin