ಡಿಜಿ-ಐಜಿಗಳ ಜೊತೆ ಸಭೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ತುರ್ತು ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--02

ಬೆಂಗಳೂರು,ಡಿ.14- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ಸಚಿವ ರಾಮಲಿಂಗಾರೆಡ್ಡಿ ಎಲ್ಲ ವಿಭಾಗಗಳ ಡಿಜಿ ಮತ್ತು ಐಜಿಗಳ ತುರ್ತು ಸಭೆ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಕೋಮುಗಲಭೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಚುನಾವಣೆ ಹತ್ತಿರವಾಗುತ್ತಿರುವುದರಿಂದ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರು ವಿಭಾಗಗಳ ಡಿಜಿ, ಐಜಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಶೀಘ್ರವೇ ಮಹತ್ವದ ಸಭೆ ನಡೆಸಲಿದ್ದಾರೆ.

ಕಾನೂನು ಸುವ್ಯವಸ್ಥೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದು ಹಾಗೂ ಮುಂಬರುವ ಚುನಾವಣೆ ಸಂದರ್ಭದಲ್ಲಿ ಸಂಘರ್ಷಗಳು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.  ಇತ್ತೀಚೆಗೆ ಉತ್ತರಕನ್ನಡ, ದಕ್ಷಿಣಕನ್ನಡ, ಹುಣಸೂರು ಮುಂತಾದ ಕಡೆ ನಡೆದ ಸಂಘರ್ಷಗಳಿಂದ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ವಿಭಾಗದ ಡಿಜಿ ಮತ್ತು ಐಜಿಗಳ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡುವುದರ ಜೊತೆಗೆ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.  ಸಂಘರ್ಷಗಳು ಮರುಕಳಿಸದಂತೆ ತೀವ್ರ ನಿಗಾ ಇಡಬೇಕು. ಅದರಲ್ಲೂ ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಲ್ಲಿ ಹಿರಿಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡಬೇಕು ಎಂದು ಈಗಾಗಲೇ ಸೂಚಿಸಿದ್ದಾರೆ.

ಈಗಾಗಲೇ ನಡೆದಿರುವ ಕೋಮು-ಗಲಭೆ ಹಾಗೂ ಸಂಘರ್ಷಗಳಿಂದ ಸರ್ಕಾರ ಮುಜುಗರ ಎದುರಿಸುವಂತಾಗಿದೆ. ಇದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಸಂಬದ್ಧ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಿದಾಡದಂತೆ ತಡೆಗಟ್ಟುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆ ಭದ್ರತೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Facebook Comments

Sri Raghav

Admin