ಸಿಂಹ v/s ರಮ್ಯಾ : ಮಂಡ್ಯದಿಂದ ಮೈಸೂರಿಗೆ ಮೋಹಕ ತಾರೆ..?

ಈ ಸುದ್ದಿಯನ್ನು ಶೇರ್ ಮಾಡಿ

Pratap-SImha-02

ಬೆಂಗಳೂರು, ಜ.2- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಚಿತ್ರನಟಿ ರಮ್ಯಾ ಅಭ್ಯರ್ಥಿಯಾಗಲಿದ್ದಾರೆ. ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಯಾಗಿರುವ ಮಾಜಿ ಸಂಸದೆ ರಮ್ಯಾ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಅಂತಹ ಒಂದು ಸುದ್ದಿ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಯಾವುದಾದರೂ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಇತ್ತು.

ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಯನ್ನು ಗಮನಿಸಿದರೆ ರಮ್ಯಾ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.  ಬಿಜೆಪಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರಿಗೆ ಎದುರಾಳಿಯಾಗಿ ರಮ್ಯಾ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.  ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸಾಕಷ್ಟು ಸುದ್ದಿ ಮಾಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿರುವ ಸಂಸದ ಪ್ರತಾಪ್ ಸಿಂಹ ಅವರ ಹೆಡೆಮುರಿ ಕಟ್ಟಲು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅವರ ಪ್ರತಿಸ್ಪರ್ಧಿಯಾಗಿ ಯುವನಾಯಕಿ ರಮ್ಯಾ ಅವರನ್ನು ಕಣಕ್ಕಿಳಿಸುವ ಬಗ್ಗೆ ವರಿಷ್ಠರು ನಿರ್ಧರಿಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ರಮ್ಯಾ ಅವರು ಕಾಂಗ್ರೆಸ್ ಪಕ್ಷವನ್ನು ಹಂತ ಹಂತವಾಗಿ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಅವರು ಕಣ್ಣಿಟ್ಟಿದ್ದರು. ಆದರೆ, ಇನ್ನೂ ಕಾಲ ಪಕ್ವವಾಗಿಲ್ಲ ಎಂದು ಮುಖ್ಯಮಂತ್ರಿಗಳೂ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಲೋಕಸಭೆ ಚುನಾವಣೆಗೆ ಮೈಸೂರಿನಲ್ಲಿ ಸ್ಪರ್ಧಿಸಿದರೆ ಜಯಗಳಿಸಲು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರ ಮಾಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಲನುಭವಿಸಿದ್ದ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು ಸದ್ಯ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಅವರು ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯುವ ನಾಯಕ ಪ್ರತಾಪ್‍ಸಿಂಹನನ್ನು ಎದುರಿಸಲು ಪ್ರಬಲ ಯುವ ನಾಯಕರನ್ನೇ ಕಣಕ್ಕಿಳಿಸಬೇಕಾದ ಅಗತ್ಯತೆ ಕಾಂಗ್ರೆಸ್‍ಗಿದೆ. ಈ ಹಿನ್ನೆಲೆಯಲ್ಲಿ ತಾರಾ ವರ್ಚಸ್ಸು ಅಲ್ಲದೆ, ಇತ್ತೀಚೆಗೆ ರಮ್ಯಾ ಬೆಳೆಸಿಕೊಂಡಿರುವ ರಾಜಕೀಯ ವರ್ಚಸ್ಸನ್ನು ಕಾಂಗ್ರೆಸ್ ಬಳಸಿಕೊಳ್ಳಲು ನಿರ್ಧರಿಸಿದೆ. ಅವರನ್ನು ಮುಂದಿನ ಲೋಕಸಭೆ ಚುನಾವಣೆಗೆ ಮೈಸೂರು ಕ್ಷೇತ್ರಕ್ಕೆ ಕಣಕ್ಕಿಳಿಸಬೇಕು ಎಂಬ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ, ಸಂಸದ ಪ್ರತಾಪ್ ಸಿಂಹ ಅವರ ಇತ್ತೀಚಿನ ಕೆಲ ಹೇಳಿಕೆಗಳಿಂದ ಬಿಜೆಪಿ ಪಕ್ಷ ಸಾಕಷ್ಟು ಮುಜುಗರ ಅನುಭವಿಸುವಂತಾಗಿದೆ. ಆ ಪಕ್ಷದ ಬಗ್ಗೆ ಆ ಕ್ಷೇತ್ರಗಳಲ್ಲಿ ಉಂಟಾಗಿರುವ ಜನವಿರೋಧಿ ನಿಲುವನ್ನು ಕಾಂಗ್ರೆಸ್ ಸಮರ್ಪಕವಾಗಿ ಬಳಸಿಕೊಳ್ಳಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿದ್ದು, ಅದರ ಭಾಗವಾಗಿ ರಮ್ಯಾ ಅವರನ್ನು ಕಣಕ್ಕಿಳಿಸುವ ಚಿಂತನೆ ನಡೆದಿದೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin