ಫೆಬ್ರವರಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

Road-Side

ಬೆಂಗಳೂರು, ಜ.6- ಫೆಬ್ರವರಿ ಮೊದಲನೆ ವಾರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆಯಾಗಲಿದೆ.  ಬಿಬಿಎಂಪಿ ವ್ಯಾಪ್ತಿಯ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡುವ ಕಾರ್ಯ ಚುರುಕುಗೊಂಡಿದ್ದು, ಫೆಬ್ರವರಿ ಮೊದಲನೆ ವಾರದಲ್ಲಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಬೃಹತ್ ಸಮಾವೇಶ ಏರ್ಪಡಿಸಿ ಗುರುತಿನ ಚೀಟಿ ವಿತರಿಸಲು ಸರ್ಕಾರ ತೀರ್ಮಾನಿಸಿದೆ.  ಮೇಯರ್ ಸಂಪತ್‍ರಾಜ್ ಮತ್ತು ಆಯುಕ್ತ ಮಂಜುನಾಥ ಪ್ರಸಾದ್ ಅವರು ಜ.25ರೊಳಗೆ ಗುರುತಿನ ಚೀಟಿ ವಿತರಣೆಯ ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸುವಂತೆ ಜಂಟಿ ಆಯುಕ್ತರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ನಮ್ಮ ಬಹುದಿನಗಳ ಬೇಡಿಕೆಯಾದ ಗುರುತಿನ ಚೀಟಿ ಫೆಬ್ರವರಿಯಲ್ಲಿ ವಿತರಣೆಯಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ಈ ಸಂಜೆಗೆ ತಿಳಿಸಿದ್ದಾರೆ.

ಸರ್ಕಾರ ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಬಜೆಟ್‍ನಲ್ಲಿ 10 ಕೋಟಿ ರೂ. ಹಣ ಮೀಸಲಿಟ್ಟಿರುವುದೇ ಅಲ್ಲದೆ 10 ಸಾವಿರ ರೂ. ಪೊ್ರೀತ್ಸಾಹ ಧನ ನೀಡುವುದು ಸೇರಿದಂತೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ, ಈ ಸವಲತ್ತಿನ ಬಗ್ಗೆ ಬೀದಿಬದಿ ವ್ಯಾಪಾರಿಗಳಿಗೆ ಸಮರ್ಪಕ ಮಾಹಿತಿಯೇ ಇಲ್ಲ. ಹೀಗಾಗಿ ಸರ್ಕಾರದ ಯೋಜನೆಗಳನ್ನು ಬೀದಿಬದಿ ವ್ಯಾಪಾರಿಗಳಿಗೆ ತಲುಪಿಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ನಮ್ಮ ಒಕ್ಕೂಟ ಕಾರ್ಯಪ್ರವೃತ್ತವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‍ಗಳಲ್ಲಿ 191 ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದೆ. ಆದರೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್‍ಗಳಲ್ಲಿ ಸಮೀಕ್ಷೆ ನಡೆಸಲು ಅಲ್ಲಿನ ಶಾಸಕ ಅಶ್ವತ್ಥ ನಾರಾಯಣ್ ಅನುಮತಿ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.  ಆದರೂ ಅವರ ಮನವೊಲಿಸುವ ಕಾರ್ಯವನ್ನು ಮುಂದುವರಿಸಲಾಗಿದೆ. ಒಟ್ಟಾರೆ ನಮ್ಮ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಲಭಿಸುವ ಲಕ್ಷಣಗಳು ಗೋಚರಿಸುತ್ತಿದ್ದು, ಫೆಬ್ರವರಿಯೊಳಗೆ ಎಲ್ಲ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಚಿಪ್ ಅಳವಡಿಕೆ: ಗುರುತಿನ ಚೀಟಿ ಮುದ್ರಣ ಕಾರ್ಯ ಪ್ರಗತಿಯಲ್ಲಿದ್ದು, ಐಡಿ ಕಾರ್ಡ್‍ಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಕಾರ್ಡ್‍ಗಳಿಗೆ ಚಿಪ್ ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ರಂಗಸ್ವಾಮಿ ತಿಳಿಸಿದರು.  ಗುರುತಿನ ಚೀಟಿಗಳನ್ನು ಕೆಲವರು ನಕಲು ಮಾಡಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಚಿಪ್ ಅಳವಡಿಸಿ ಕೋಡ್‍ವರ್ಡ್ ನೀಡುವುದರಿಂದ ಅನಾಹುತ ತಪ್ಪಿಸಬಹುದು ಎಂಬ ಅಭಿಪ್ರಾಯದಿಂದ ಚಿಪ್ ಅಳವಡಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

Facebook Comments

Sri Raghav

Admin