ಕಾಂಗ್ರೆಸ್ ಯುವ ಕಾರ್ಯಕರ್ತರಿಗೆ ರಮ್ಯಾ ಮೇಡಂ ಕ್ಲಾಸ್

ಈ ಸುದ್ದಿಯನ್ನು ಶೇರ್ ಮಾಡಿ

ramya

ನವದೆಹಲಿ, ಜ.7- ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಸೋಷಿಯಲ್ ಮೀಡಿಯಾ ನಿರ್ವಹಣೆ ಬಗ್ಗೆ ನವದೆಹಲಿಯಲ್ಲಿ ಯುವ ಕಾಂಗ್ರೆಸ್ ಮುಖಂಡರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬಗ್ಗೆ ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಅವರು ಸಲಹೆ-ಸೂಚನೆಗಳನ್ನು ತರಬೇತಿ ರೂಪದಲ್ಲಿ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಹೇಗಿಡಬೇಕು, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳು, ಕೇಂದ್ರದ ಎನ್‍ಡಿಎ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ಜನವಿರೋಧಿ ನಿರ್ಧಾರಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹೇಗೆ ತಲುಪಿಸಬೇಕು ಎಂಬ ಬಗ್ಗೆ ಅವರು ಸೂಚನೆಗಳನ್ನು ರವಾನಿಸಿದ್ದಾರೆ.  ಕಾಂಗ್ರೆಸ್ ಪಕ್ಷ ಹಾಗೂ ನಾಯಕರು ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರ ಬಗ್ಗೆ ಟ್ರೋಲ್‍ಗಳು, ವ್ಯಂಗ್ಯಭರಿತ ಹೇಳಿಕೆಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎಂಬಿತ್ಯಾದಿಗಳ ಬಗ್ಗೆ ಅವರು ಕ್ಲಾಸ್‍ನಲ್ಲಿ ತಿಳಿಸಿದ್ದಾರೆ.

ಇನ್ನೇನು ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ. ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ, ಒಳ್ಳೆಯ ಹೆಸರಿದೆ. ಇದರ ಪ್ರಚಾರವನ್ನು ವ್ಯಾಪಕವಾಗಿ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಬೇಕೆಂದು ಅವರು ಕರೆ ನೀಡಿದ್ದಾರೆ. ಈಗಾಗಲೇ ಸೋಷಿಯಲ್ ನೆಟ್‍ವರ್ಕ್‍ನ ಒಂದು ಯುವ ಪಡೆ ರಾಜ್ಯದಲ್ಲಿ ಬೀಡು ಬಿಟ್ಟಿದೆ. ಕೆಪಿಸಿಸಿ ವತಿಯಿಂದ ಒಂದು ತಂಡ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಎಲ್ಲ ಶಾಸಕರು, ಸಚಿವರು ಸಾಮಾಜಿಕ ಜಾಲತಾಣಗಳ ವ್ಯಾಪ್ತಿಗೆ ಬರಬೇಕೆಂದು ಎಐಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ಎರಡು ತಿಂಗಳ ಹಿಂದೆಯೇ ಸೂಚನೆ ನೀಡಿದ್ದರು.
ಹೀಗಾಗಿ ಬಹುತೇಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದೆ. ಚುನಾವಣೆಯಲ್ಲಿ ಈ ತಾಣವನ್ನು ಇನ್ನೂ ಹೆಚ್ಚಾಗಿ ಬಳಸಿಕೊಂಡು ಜನರನ್ನು ತಲುಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

Facebook Comments

Sri Raghav

Admin