ಮಹದಾಯಿ, ಕಳಸಾ-ಬಂಡೂರಿ ವಿಚಾರ ಕುರಿತು ನಾಳೆ ಸರ್ವಪಕ್ಷಗಳ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ
All-Party-01
ಸಂಗ್ರಹ ಚಿತ್ರ

ಬೆಂಗಳೂರು, ಜ.26-ಮಹದಾಯಿ, ಕಳಸಾ-ಬಂಡೂರಿ ವಿಚಾರ ಕುರಿತು ಚರ್ಚೆ ನಡೆಸಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನರು ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡುತ್ತಿರುವ ನಡುವೆ ನಿನ್ನೆ ಕರ್ನಾಟಕ ಬಂದ್ ಆಚರಿಸಿ ಈ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಲಾಗಿದೆ.

ಅದರಲ್ಲೂ ಗೋವಾ ಸರ್ಕಾರ ಮೊದಲು ನೀರು ಬಿಡುವುದಾಗಿ ಹೇಳಿ ಇದೀಗ ತನ್ನ ನಿಲುವನ್ನು ಬದಲಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಮುಂದೇನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ. ಈ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ವಿಧಾನಮಂಡಲದ ಉಭಯ ಸದನಗಳ ಸದಸ್ಯರು, ವಿರೋಧ ಪಕ್ಷದ ಮುಖಂಡರು, ರಾಜಕೀಯ ಪಕ್ಷಗಳ ಅಧ್ಯಕ್ಷರು, ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು ಹಾಗೂ ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಾಲ್ವರು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ರೈತ ಮುಖಡರನ್ನು ಸಭೆಗೆ ಆಹ್ವಾನಿಸಲಾಗಿದ್ದು, ರಾಜ್ಯದಲ್ಲಿ ಮಹದಾಯಿ ಹಾಗೂ ಕಳಸಾ-ಬಂಡೂರಿ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ. ಈವರೆಗೂ ಕಳಸಾ-ಬಂಡೂರಿ ಅನುಷ್ಠಾನ ಕುರಿತಂತೆ ಪತ್ರ ವ್ಯವಹಾರ ನಡೆಸಿದರೂ ಸಹ ಗೋವಾ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಯಾವುದೇ ನಿಲುವು ಪ್ರಕಟಿಸದಿರುವುದು, ನ್ಯಾಯಾಧೀಕರಣ ಈಗಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಹೇಳಿದ್ದರೂ ಈ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಫಲ ನೀಡದಿರುವುದು ಇಂತಹ ಹಲವಾರು ವಿಷಯಗಳು ಇತ್ಯರ್ಥವಾಗದೇ ಉಳಿದಿರುವುದರಿಂದ ಸಮಸ್ಯೆಗಳು ದಿನದಿಂದ ದಿನಕ್ಕೆ ಇಮ್ಮಡಿಸುತ್ತಿದೆಯೇ ವಿನಃ ಕಡಿಮೆಯಾಗಿಲ್ಲ. ಹಾಗಾಗಿ ಮತ್ತೆ ಸಭೆಯಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಉಲ್ಬಣಿಸಿರುವ ಇಕ್ಕಟ್ಟಿನ ಪರಿಸ್ಥಿತಿ ನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin