ಎಂ.ಕೃಷ್ಣಪ್ಪನವರ ಹ್ಯಾಟ್ರಿಕ್ ಗೆಲುವಿನ ಕನಸು ನನಸಾಗುವುದೇ..?

ಈ ಸುದ್ದಿಯನ್ನು ಶೇರ್ ಮಾಡಿ

bengaluru-south-1

ರಮೇಶ್ ಪಾಳ್ಯ

ನಗರದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿಯ ಎಂ.ಕೃಷ್ಣಪ್ಪ ಅವರದೇ ಕಾರುಬಾರು. ಎರಡು ಬಾರಿ ಶಾಸಕರಾಗಿರುವ ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ನಂತರ ರಚನೆಯಾದ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಭಾರೀ ಅಂತರದಿಂದ ಆರಿಸಿ ಬಂದಿದ್ದ ಎಂ.ಕೃಷ್ಣಪ್ಪ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 1,02,201 ಮತಗಳನ್ನು ಪಡೆದಿದ್ದರು. ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಪ್ರಭಾಕರ್‍ರೆಡ್ಡಿ ಅವರು 72,045 ಮತಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದರು.

ಇಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಮಾಜಿ ಸಂಸದೆ ತೇಜಸ್ವಿನಿಗೌಡ ಅವರು ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.  ಈ ಚುನಾವಣೆ ನಂತರ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿರುವ ತೇಜಸ್ವಿನಿ ಅವರು ಈಗ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.  2018ರ ಮೇನಲ್ಲಿ ನಡೆಯಲಿರುವ ಚುನಾವಣೆಯಲ್ಲೂ ಕೃಷ್ಣಪ್ಪ ಅವರೇ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಬಾರಿ ಕೃಷ್ಣಪ್ಪ ಅವರ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಪರಾಭವಗೊಂಡಿದ್ದ ಪ್ರಭಾಕರ್‍ರೆಡ್ಡಿ ಅವರು ಇದೀಗ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದು, ಈ ಬಾರಿ ಅವರೇ ಕೈ ಅಭ್ಯರ್ಥಿಯಾಗಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವ ಸಾಧ್ಯತೆಗಳಿವೆ.

ಡಿಕೆ ಸಹೋದರರ ಬೆಂಬಲವಿರುವ ಪ್ರಭಾಕರ್‍ರೆಡ್ಡಿ ಅವರು ಈ ಬಾರಿ ಕೈ ಟಿಕೆಟ್ ಖಚಿತ ಎಂಬ ಭಾವನೆಯಲ್ಲಿದ್ದರೆ, ಸುಷ್ಮಾ ರಾಜಗೋಪಾಲರೆಡ್ಡಿ ಅವರು ನನಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಸಾಧನೆ ಶೂನ್ಯ. ಆದರೆ, ಈ ಬಾರಿ ರಾಜರಾಜೇಶ್ವರಿನಗರ, ಯಶವಂತಪುರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಜೆಡಿಎಸ್ ವರಿಷ್ಠರು ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರ ಬಲಗೈ ಬಂಟ ಎಂದೇ ಗುರುತಿಸಿಕೊಂಡಿರುವ ಗೊಟ್ಟಿಗೆರೆ ಮಂಜು ಅವರಿಗೆ ಜೆಡಿಎಸ್ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ.  ಅನ್ಯ ಪಕ್ಷಗಳಲ್ಲಿ ಟಿಕೆಟ್ ವಂಚಿತ ಆಕಾಂಕ್ಷಿಗಳಿಗೆ ಎಂ.ಕೃಷ್ಣಪ್ಪ ಅವರನ್ನು ಸೋಲಿಸುವ ಸಾಮಥ್ರ್ಯವಿದ್ದರೆ ಅಂತಹವರಿಗೆ ಟಿಕೆಟ್ ನೀಡುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.  ಒಟ್ಟಾರೆ ಕೃಷ್ಣಪ್ಪ ಅವರ ಹ್ಯಾಟ್ರಿಕ್ ಗೆಲುವಿಗೆ ಅವಕಾಶ ಮಾಡಿಕೊಡಬಾರದು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀರ್ಮಾನಿಸಿರುವುದರಿಂದ ಮುಂದಿನ ಚುನಾವಣೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವುದಂತೂ ಖಚಿತ.

Facebook Comments

Sri Raghav

Admin