‘ಆರ್ಕೆಸ್ಟ್ರಾ, ನಂಗಾನಾಚ್ ಗೆ ಅನುಮತಿ ಇಲ್ಲ ‘

ಈ ಸುದ್ದಿಯನ್ನು ಶೇರ್ ಮಾಡಿ

Naganach--01

ಬೆಂಗಳೂರು, ಏ.2- ಚುನಾವಣೆ ಸಂದರ್ಭದಲ್ಲಿ ನಂಗಾನಾಚ್ ಮತ್ತು ಆರ್ಕೆಸ್ಟ್ರಾ ನಡೆಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಭರವಸೆ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನ್ಯಾಯಸಮ್ಮತ ಮತ್ತು ಮುಕ್ತ ಚುನಾವಣೆ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಚುನಾವಣಾ ಆಯೋಗದ ಸಂಪರ್ಕದಲ್ಲಿದ್ದು, ನಿರ್ಭೀತ ಮತದಾನಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಚುನಾವಣೆ ಮುಗಿಯುವವರೆಗೂ ರಾಜ್ಯದ ಯಾವುದೇ ಭಾಗದಲ್ಲಿ ನಂಗಾನಾಚ್ ಮತ್ತು ಆರ್ಕೆಸ್ಟ್ರಾ ನಡೆಸಲು ಅನುಮತಿ ನೀಡುವುದಿಲ್ಲ. ಒಂದು ವೇಳೆ ಯಾವುದೇ ಪಕ್ಷದ ಕಾರ್ಯಕರ್ತರು ನಂಗಾನಾಚ್ ನಡೆಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೀಲಮಣಿ ಎನ್.ರಾಜು ಭರವಸೆ ನೀಡಿದರು. ಆಯಾ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಯಾವುದೇ ಭಾಗದಲ್ಲಿ ನೀತಿ-ಸಂಹಿತೆ ಉಲ್ಲಂಘಿಸಿದರೆ ಅವರು ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮಕ್ಕೂ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು. ಒಟ್ಟಾರೆ ರಾಜ್ಯದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಲಾಗುವುದು ಎಂದು ನೀಲಮಣಿ ಎನ್.ರಾಜು ಹೇಳಿದರು. ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಡಿಜಿಪಿ ಭಾಸ್ಕರ್ ರಾವ್ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Facebook Comments

Sri Raghav

Admin