ಕೇಂದ್ರ ಚುನಾವಣಾ ಆಯುಕ್ತರಿಗೆ ದೇವೇಗೌಡರ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Devegowda--01
ಬೆಂಗಳೂರು, ಏ.5- ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯವ ಬಗ್ಗೆ ಅನುಮಾನವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂಪ್ರಕಾಶ್ ರಾವತ್ ಅವರಿಗೆ ದೂರು ನೀಡಿದ್ದಾರೆ.  ಇಂದು ಬೆಳಗ್ಗೆ ರಾವತ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ ಗೌಡರು, ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯ ವಿಧಾನಸಭೆ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವ ಬಗ್ಗೆ ಅನುಮಾನವಿದೆ ಎಂದು ಹೇಳಿರುವುದಾಗಿ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಮೂರು ತಿಂಗಳ ಮುನ್ನ ತಮಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಆಗಿರುವ ವರ್ಗಾವಣೆಗಳನ್ನು ಆಯೋಗ ಪರಿಶೀಲಿಸಬೇಕು. ಚುನಾವಣಾ ಮಾರ್ಗಸೂಚಿಗೆ ವಿರುದ್ಧವಾಗಿದ್ದರೆ ವರ್ಗಾವಣೆಗಳನ್ನು ಮಾರ್ಪಾಡು ಮಾಡಬೇಕೆಂದು ಆಯುಕ್ತರನ್ನು ಕೋರಿರುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಶ್ವೇಚ್ಚಾರವಾಗಿ ವರ್ಗಾವಣೆ ಮಾಡಲಾಗಿದೆ. ಎಲ್ಲವನ್ನೂ ಪರಿಶೀಲಿಸಿ ಅಗತ್ಯ ಇರುವ ಕಡೆ ಮಾರ್ಪಾಡು ಮಾಡಬೇಕು. ನಿಷ್ಠಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಶಾಸಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲ ಹಂತದ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ. ಗೃಹ ಇಲಾಖೆಯಲ್ಲಿ ಹಲವು ನ್ಯೂನ್ಯತೆಗಳಿವೆ. ಕಾನೂನು ಪಾಲನೆ ಕೂಡ ಸಡಿಲವಾಗಿದೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ರಾಜ್ಯದ ನಿಷ್ಠಾವಂತ ಅಧಿಕಾರಿಗಳಲ್ಲದೆ ಕೇಂದ್ರ ಪಡೆಯನ್ನೂ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ಹೇಳಿದರು.

ಗೃಹ ಇಲಾಖೆಯಲ್ಲಿ ಸೂಪರ್ ಗೃಹ ಸಚಿವರಿದ್ದಾರೆ. ವಿಕಾಸಸೌಧದಲ್ಲಿರುವ ಗೃಹ ಸಚಿವರ ಕಚೇರಿಗೆ ಬೀಗ ಜಡಿಯಲಾಗಿದೆ. ಬೇರೆ ಕಡೆ ಕಚೇರಿ ತೆಗೆದು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ಅವರ ಹೆಸರನ್ನು ಪ್ರಸ್ತಾಪಿಸದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಈ ಬಗ್ಗೆ ಆಯೋಗ ಗಮನ ಹರಿಸಬೇಕು ಎಂದು ಮನವಿ ಮಾಡಿರುವುದಾಗಿ ಗೌಡರು ತಿಳಿಸಿದರು.  ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸುಮಾರು 6 ವಿವಿಧ ದೂರುಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್‍ಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.

Facebook Comments

Sri Raghav

Admin