ವೋಟರ್ ಐಡಿ ಗೋಲ್ಮಾಲ್ : ಮುನಿರತ್ನ ವಿರುದ್ಧ ಎಫ್‍ಐಆರ್ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Muniratna--01
ಬೆಂಗಳೂರು, ಮೇ 10- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಸೇರಿದಂತೆ 14 ಮಂದಿ ವಿರುದ್ಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರರಾವ್ ಹಾಗೂ ಚುನಾವಣಾ ವೀಕ್ಷಕರು ನೀಡಿದ ದೂರಿನ ಮೇರೆಗೆ 14 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆರ್‍ಆರ್ ನಗರ ಕ್ಷೇತ್ರವ್ಯಾಪ್ತಿಯ ಜಾಲಹಳ್ಳಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ 9 ಸಾವಿರಕ್ಕೂ ಹೆಚ್ಚು ವೋಟರ್ ಐಡಿ ಮತ್ತಿತರ ವಸ್ತುಗಳು ಪತ್ತೆಯಾಗಿದ್ದವು. ಈ ಕುರಿತಂತೆ ಬಂದ ಮಾಹಿತಿ ಮೇರೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಜಾಲಹಳ್ಳಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬಿ.ಕೆ.ಸಿಂಗ್ ವಿವರಿಸಿದರು.

Facebook Comments

Sri Raghav

Admin