ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣದ ಸುಳ್ಳುಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

CHild-Kidnap

ತುಮಕೂರು,ಮೇ18- ವಾಟ್ಸಪ್ ಮತ್ತು ಫೇಸ್‍ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾಗೋಪಿನಾಥ್ ಅವರು ಎಚ್ಚರಿಸಿದ್ದಾರೆ. ಕೇರಳ, ಆಂಧ್ರಪ್ರದೇಶದಿಂದ ಮಕ್ಕಳನ್ನು ಅಪಹರಿಸಲು ಮಹಿಳೆಯರು ಸೇರಿದಂತೆ ಅಪಹರಣಕಾರರ ತಂಡವೊಂದು ತುಮಕೂರು ಜಿಲ್ಲೆಯ ಕೆಲವು ಗ್ರಾಮಗಳಿಗೆ ಬಂದಿದೆ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು , ಈ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.

ಸಂದೇಶದ ಜೊತೆಗೆ ಕೆಲವು ಫೋಟೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಯಬಿಟ್ಟಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ಸುಳ್ಳು ಸಂದೇಶಗಳಿಂದ ಜನರಲ್ಲಿ ಆತಂಕವುಂಟಾಗಿದೆ. ಈ ರೀತಿಯ ಸಂದೇಶಗಳಿಂದ ಜನರು ಆತಂಕ ಪಡುವ ಅಗತ್ಯವಿಲ್ಲ ಹಾಗೂ ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಎಸ್‍ಪಿ ಅವರು ಮನವಿ ಮಾಡಿದ್ದಾರೆ. ಕೆಲವು ವಿಕೃತಕಾಮಿಗಳು ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ ಯಾರೂ ಇದಕ್ಕೆ ಕಿವಿಗೊಡಬಾರದು. ಜಿಲ್ಲೆಯಲ್ಲಿ ಮಕ್ಕಳ ಅಪಹರಣಗಳು ಎಲ್ಲಿಯೂ ದಾಖಲಾಗಿಲ್ಲ. ಈ ರೀತಿಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಗ್ರಾಮಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವ ಹಾಗೂ ಅಪರಿಚಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ತಮ್ಮ ಗ್ರಾಮಗಳ ವ್ಯಾಪ್ತಿಯ ಬೀಟ್ ಪೊಲೀಸ್ ಅಧಿಕಾರಿ ಹಾಗೂ ಸಂಬಂಧಪಟ್ಟ ದೂರವಾಣಿಗೆ ಕರೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin