ಆರ್ ಆರ್ ನಗರ, ಜಯನಗರದಲ್ಲೂ ಚುನಾವಣೆಯಲ್ಲೂ ‘ಕಾಂಜೆ’ ಮೈತ್ರಿ ಮುಂದುವರಿಕೆ..?

ಈ ಸುದ್ದಿಯನ್ನು ಶೇರ್ ಮಾಡಿ

JDS---Congress
ಬೆಂಗಳೂರು, ಮೇ 20- ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನ ಲಭಿಸಿದರೂ ಸರ್ಕಾರ ರಚಿಸಲು ಸಾಧ್ಯವಾಗದ ಬಿಜೆಪಿ ಜಯನಗರ, ರಾಮನಗರ ಹಾಗೂ ರಾಜರಾಜೇಶ್ವರಿನಗರದಲ್ಲಿ ಮುಂದೂಡಿದ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಆ ಕ್ಷೇತ್ರಗಳಲ್ಲೂ ಮೈತ್ರಿ ಮಾಡಿಕೊಂಡು ಕೇಸರಿ ಪಡೆಗೆ ತಿರುಗೇಟು ನೀಡಲು ಕಾಂಗ್ರೆಸ್-ಜೆಡಿಎಸ್ ಮರುತಂತ್ರ ರೂಪಿಸಿವೆ. ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ್‍ಕುಮಾರ್ ನಿಧನದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ಮುನ್ಸೂಚನೆ ನೀಡಿದೆ.

ಅದೇ ರೀತಿ ವೋಟರ್ ಐಡಿ ಅಕ್ರಮ ಸಂಗ್ರಹ ಪ್ರಕರಣದಿಂದ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆ ಇದೆ. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ರಾಮನಗರಕ್ಕೆ ನಡೆಯಲಿರುವ ಮರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ ಬೆಂಬಲ ನೀಡಲು ಮಾತುಕತೆ ನಡೆಯುತ್ತಿವೆ ಎಂದು ತಿಳಿದುಬಂದಿದೆ.

ಜಯನಗರದಲ್ಲಿ ಮೃತಪಟ್ಟ ಬಿ.ಎನ್.ವಿಜಯ್‍ಕುಮಾರ್ ಅವರ ಸಹೋದರ ರಾಮು ಇಲ್ಲವೆ ಮಾಜಿ ಮೇಯರ್ ಎಸ್.ಕೆ.ನಟರಾಜ್ ಅಥವಾ ಸಿ.ಕೆ.ರಾಮಮೂರ್ತಿ ಅವರು ಬಿಜೆಪಿ ಅಭ್ಯರ್ಥಿಗಳಾಗುವ ಸಂಭವವಿದೆ. ಈ ಕ್ಷೇತ್ರದಲ್ಲಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ರೆಡ್ಡಿ ಅವರನ್ನು ಜೆಡಿಎಸ್ ಬೆಂಬಲಿಸುವ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ವಿರುದ್ಧ ಹಲವಾರು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ರಾಮಚಂದ್ರ ಅವರನ್ನು ಕಾಂಗ್ರೆಸ್ ಬೆಂಬಲಿಸಲಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ತುಳಸಿ ಮುನಿರಾಜುಗೌಡ ಅವರು ಅಭ್ಯರ್ಥಿಯಾಗಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಲಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಯನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆಗಳು ನಿಚ್ಚಳವಾಗಿವೆ.

Facebook Comments

Sri Raghav

Admin