ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ವಿರೋಧಿಸಿ ವಾಟಾಳ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Vatal--01

ಬೆಂಗಳೂರು, ಮೇ 20-ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕೇಂದ್ರ ಸರ್ಕಾರದ ಭೂತದಹನ ಮಾಡುವ ಮೂಲಕ ಪ್ರತಿಭಟನೆ ಮಾಡಲಾಯಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ನಮ್ಮ ಕೈ ಕಟ್ಟಿ ಹಾಕಿದೆ. ಕಾವೇರಿ ಜಲಾನಯನ ಎಲ್ಲಾ ಅಣೆಕಟ್ಟುಗಳನ್ನು ತಮ್ಮ ವಶಕ್ಕೆ ಪಡೆದು ನಾವು ಕುಡಿಯುವ ನೀರಿಗೂ ಅವರನ್ನು ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಕಾರಣಕ್ಕೂ ಪ್ರಾಧಿಕಾರ ರಚನೆಯಾಗಬಾರದು. ಇದರಿಂದ ರಾಜ್ಯಕ್ಕೆ ತೀವ್ರ ಅನ್ಯಾಯವಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.

ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ, ಸರ್ಕಾರ ರಚನೆಯ ಗುಂಗಿನಲ್ಲಿವೆ. ಆದರೆ ಕೇಂದ್ರ ಸರ್ಕಾರ ಪ್ರಾಧಿಕಾರ ರಚಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಯಾರೂ ಇದನ್ನು ಗಮನಿಸುತ್ತಿಲ್ಲ. ಕಾವೇರಿಯಲ್ಲಿ ಅನ್ಯಾಯ, ಮಹದಾಯಿ, ಮೇಕೆದಾಟು ಎಲ್ಲಾ ವಿಷಯದಲ್ಲೂ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಭಾಗದ ಅಭಿವೃದ್ದಿಯನ್ನೂ ಕೂಡ ತೀವ್ರವಾಗಿ ಕಡೆಗಣಿಸಲಾಗಿದೆ. ರಾಜ್ಯದ ಸಂಸದರು, ನಮಗೂ, ಇದಕ್ಕೂ ಸಂಬಂಧವಿಲ್ಲವೇನೋ ಎಂಬ ರೀತಿಯಲ್ಲಿದ್ದಾರೆ. ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿರುವ ಬಗ್ಗೆ ನಾವು ನಿರಂತರವಾಗಿಯೇ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಪರವಾಗಿ ಕೇಂದ್ರದಿಂದ ನ್ಯಾಯ ಸಿಕ್ಕಿಲ್ಲ ಎಂದು ವಾಟಾಳ್ ಹೇಳಿದರು.  ಈ ಕೂಡಲೇ ಎಚ್ಚೆತ್ತು ಪ್ರಾಧಿಕಾರದ ವಿರುದ್ಧ ಎಲ್ಲರೂ ದನಿ ಎತ್ತಬೇಕು. ನಮ್ಮ ನೀರನ್ನು ಉಳಿಸಿಕೊಳ್ಳುವ ಅಗತ್ಯ ಮತ್ತು ಅನಿವಾರ್ಯತೆ ಇದೆ ಎಂದು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin