ಡಿಕೆಶಿಗೆ ಒಲಿಯುವುದೇ ಕೆಪಿಸಿಸಿ ಪಟ್ಟ…?

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar
ಬೆಂಗಳೂರು, ಮೇ 20-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಡಾ.ಜಿ.ಪರಮೇಶ್ವರ್ ಸಚಿವ ಸಂಪುಟದಲ್ಲಿ ಪ್ರಮುಖ ಹುದ್ದೆ ಪಡೆಯುವ ಸಾಧ್ಯತೆ ಇದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗುತ್ತಿದ್ದು, ಅದರ ಮೇಲೆ ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದಾರೆ.
ಇತ್ತೀಚಿನ ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್‍ನ ಆಪದ್ಬಾಂಧವ ಎಂದೇ ಹೇಳಲಾಗುತ್ತಿರುವ ಡಿ.ಕೆ.ಶಿವಕುಮಾರ್ ಪಕ್ಷದ ಸಾರಥಿಯಾಗುವ ಸಾಧ್ಯತೆಗಳಿವೆ.

ಎಐಸಿಸಿ ಈಗಾಗಲೇ ಬಹುತೇಕ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗಳನ್ನು ಪುನರ್‍ರಚನೆ ಮಾಡಿದ್ದು, ಕರ್ನಾಟಕದಲ್ಲಿ ಚುನಾವಣೆ ಇದ್ದ ಕಾರಣಕ್ಕಾಗಿ ಪರಮೇಶ್ವರ್ ಅವರನ್ನೇ ಎರಡನೇ ಬಾರಿಗೂ ಅಧ್ಯಕ್ಷರನ್ನಾಗಿ ಮುಂದುವರಿಸಲಾಗಿತ್ತು. ಸುಮಾರು ಎಂಟು ವರ್ಷಗಳಿಂದ ಪಕ್ಷದ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರನ್ನು ಬದಲಾಯಿಸುವ ಸಾಧ್ಯತೆಗಳಿವೆ.

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಬಲ ಸಮುದಾಯಗಳಾದ ಲಿಂಗಾಯಿತ ಅಥವಾ ಒಕ್ಕಲಿಗರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬೇಡಿಕೆ ಇದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಗೆ ಸಿದ್ದರಾಮಯ್ಯರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಬೇಡಿಕೆಗಳು ಇರುವುದರಿಂದ ಒಬ್ಬರಿಗೆ ಎರಡು ಹುದ್ದೆಗಳನ್ನು ನೀಡಲು ಹೈಕಮಾಂಡ್ ಹಿಂದೇಟು ಹಾಕುತ್ತಿದೆ.

ಮತ್ತೊಂದೆಡೆ ಡಿ.ಕೆ.ಶಿವಕುಮಾರ್ ಅವರು ಕಳೆದ ಸರ್ಕಾರದಲ್ಲಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿ ಆಗಿ ಎಲ್ಲಾ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಡ್ಡು ಹೊಡೆದು ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಾದರೆ ಅದಕ್ಕೆ ಡಿ.ಕೆ.ಶಿವಕುಮಾರ್ ಅವರೇ ಸೂಕ್ತ ವ್ಯಕ್ತಿ ಎಂಬ ಚರ್ಚೆಗಳು ನಡೆಯುತ್ತಿವೆ.

ಒಂದು ವೇಳೆ ಉಪಮುಖ್ಯಮಂತ್ರಿ ಹುದ್ದೆ ಡಿ.ಕೆ.ಶಿವಕುಮಾರ್ ಅವರಿಗೆ ಒಲಿದು ಬಂದರೆ ಲೋಕಸಭೆ ಚುನಾವಣೆ ವರೆಗೂ ಪರಮೇಶ್ವರ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆ ಇದೆ. ಆದರೆ, ಮುಖ್ಯಮಂತ್ರಿ ಆಗುತ್ತಿರುವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಒಂದೇ ಸಮುದಾಯಕ್ಕೆ ಸೇರಿದವರಾದ್ದರಿಂದ ಎರಡು ಪ್ರಮುಖ ಹುದ್ದೆಗಳನ್ನು ಒಂದೇ ಸಮುದಾಯಕ್ಕೆ ನೀಡಿದರೆ ಮೈತ್ರಿ ಕೂಟದ ಆಶಯಕ್ಕೆ ಧಕ್ಕೆಯಾಗಬಹುದು ಎಂಬ ಲೆಕ್ಕಾಚಾರಗಳೂ ನಡೆದಿವೆ. ಹೀಗಾಗಿ ಮುಂದಿನ ಬೆಳವಣಿಗೆಗಳಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುತ್ತಾರೋ, ಉಪಮುಖ್ಯಮಂತ್ರಿಯಾಗುತ್ತಾರೋ ಅಥವಾ ಸಚಿವರಾಗುತ್ತಾರೋ ಎಂಬ ಕುತೂಹಗಳು ಆರಂಭವಾಗಿವೆ.

Facebook Comments

Sri Raghav

Admin