ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಗಳಲ್ಲಿ ಬಹುಮತ ಸಾಬೀತುಪಡಿಸುತ್ತೇವೆ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

DK-SHivakumar-Kumaraswamy-J

ಬೆಂಗಳೂರು, ಮೇ 20- ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವುದಾಗಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ವಿಧಾನಸಭೆ ಅಧಿವೇಶನ ಕರೆದು ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸಲಾಗುವುದು. ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನದ ವಿಚಾರದ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ 15 ದಿನದೊಳಗೆ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ.

ಅಲ್ಲಿಯವರೆಗೂ ಸಮಯಾವಕಾಶ ತೆಗೆದುಕೊಳ್ಳದೆ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಬಹುಮತ ಸಾಬೀತುಪಡಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಭಿನಂದನೆಗಳ ಸುರಿಮಳೆ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಕುಮಾರಸ್ವಾಮಿಗೆ ಆಹ್ವಾನ ನೀಡಿದ ಬೆನ್ನಲ್ಲೇ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇಂದು ಬೆಳಗ್ಗೆ ಜೆಪಿ ನಗರದ ನಿವಾಸಕ್ಕೆ ತೆರಳಿದ ಹಲವು ಮುಖಂಡರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದ ಮುಂದೆಯೂ ಅಭಿಮಾನಿಗಳ ದಂಡೇ ನೆರೆದಿತ್ತು. ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಿದ್ದಲ್ಲದೆ ಜಯಘೋಷಗಳನ್ನು ಕೂಗಲಾಯಿತು.

Facebook Comments

Sri Raghav

Admin