ಕುಮಾರಸ್ವಾಮಿ ಪಟ್ಟಾಭಿಷೇಕಕ್ಕೆ ಸಾಕ್ಷಿಯಾಗಲಿದ್ದಾರೆ ಘಟಾನುಘಟಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Kumaraswmy

ಬೆಂಗಳೂರು, ಮೇ 22-ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಕಾಂಗ್ರೆಸ್, ಬಿಎಸ್‍ಪಿ ನಾಯಕರೂ, ಐವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ನಟ ಕಮಲ್‍ಹಾಸನ್ ಸೇರಿದಂತೆ 12ಕ್ಕೂ ಹೆಚ್ಚುಮಂದಿ ಗಣ್ಯಾತಿಗಣ್ಯರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಎಸ್‍ಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.

ಕೇರಳ ಮುಖ್ಯಮಂತ್ರಿ ಪಿಣ್ಣರಾಯ್ ವಿಜಯನ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅವರ ಪುತ್ರ ಆರ್‍ಜೆಡಿಯ ತೇಜಸ್ವಿ ಯಾದವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್, ರಾಷ್ಟ್ರೀಯ ಲೋಕದಳದ ಸಂಸ್ಥಾಪಕ ಅಜಿತ್‍ಸಿಂಗ್, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ಆಗಮಿಸಲಿದ್ದಾರೆ.
ಜೊತೆಗೆ ನಟ ಕಮಲ್‍ಹಾಸನ್ ಕೂಡ ವಿಶೇಷ ಅತಿಥಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದ ಮೆಟ್ಟಿಲುಗಳ ಮೇಲೆ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ 4.30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇದಿಕೆ ಸಿದ್ಧಪಡಿಸುವ ಕಾರ್ಯ ಭರದಿಂದ ಸಾಗಿದೆ. ಸಮಾರಂಭಕ್ಕೆ ಆಗಮಿಸುವ ಗಣ್ಯಾತಿಗಣ್ಯರಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ.

Facebook Comments

Sri Raghav

Admin