ಪ್ರತಿದಿನ ಬೆಳಗ್ಗೆ 10ರಿಂದ 11 ಗಂಟೆವರೆಗೆ ಸಿಎಂ ಕುಮಾರಸ್ವಾಮಿ ಜನತಾದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಮೇ 24- ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನದಿಂದಲೇ ಪ್ರತಿನಿತ್ಯ ಜನತಾದರ್ಶನ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.  ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 10 ರಿಂದ 11ಗಂಟೆವರೆಗೆ ಪ್ರತಿನಿತ್ಯ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿದಿನ ಬೆಳಗ್ಗೆ 10 ರಿಂದ 11 ಗಂಟೆವರೆಗೂ ಸಾರ್ವಜನಿಕರ ಹಾಗೂ ಗಣ್ಯರನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಜನತಾ ದರ್ಶನ ನಡೆಸಲಾಗುತ್ತಿದೆ.  ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜೆಪಿ ನಗರದ ಖಾಸಗಿ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾದರೆ ಜನದಟ್ಟಣೆ ಉಂಟಾಗಿ ಬಡಾವಣೆಯ ಇತರ ನಿವಾಸಿಗಳಿಗೆ ಅಡಚಣೆಯಾಗಲಿದೆ. ಹೀಗಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲೇ ಸಾರ್ವಜನಿಕರ ಭೇಟಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.   2006ರಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಕುಮಾರಸ್ವಾಮಿಯವರು ನಡೆಸಿದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯಕ್ಕೆ ಜನಮನ್ನಣೆ ಲಭಿಸಿತ್ತು.

2018ರ ಚುನಾವಣೆಗೂ ಮುನ್ನ ಕುಮಾರಸ್ವಾಮಿಯವರು ಮತ್ತೆ ನಾನು ಈ ರಾಜ್ಯದ ಮುಖ್ಯಮಂತ್ರಿಯಾದರೆ ಹಿಂದಿನ ಅವಧಿಯ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ರಾಜ್ಯದ 25ನೆ ಮುಖ್ಯಮಂತ್ರಿಯಾಗಿ ಎರಡನೆ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಮರುದಿನದಿಂದಲೇ ಕುಮಾರಸ್ವಾಮಿಯವರು ಪ್ರತಿನಿತ್ಯ ಜನತಾ ದರ್ಶನ ನಡೆಸಲು ತೀರ್ಮಾನಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಗ್ರಾಮ ವಾಸ್ತವ್ಯ ನಡೆಸುವ ಮೂಲಕ ಜನಮಾನಸಕ್ಕೆ ಮತ್ತಷ್ಟು ಹತ್ತಿರವಾಗಲು ಪ್ರಯತ್ನಿಸುವ ಸಾಧ್ಯತೆಗಳಿವೆ.

Facebook Comments

Sri Raghav

Admin