ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಮೇಶ್‍ಕುಮಾರ್ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar-Congress

ಬೆಂಗಳೂರು, ಮೇ 24- ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಸಂಸದ ಕೆ.ಎಚ್.ಮುನಿಯಪ್ಪ, ಶಾಸಕ ಬಿ.ಸಿ.ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರೊಂದಿಗೆ ಆಗಮಿಸಿದ ರಮೇಶ್‍ಕುಮಾರ್ ಅವರು ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು.

ರಮೇಶ್‍ಕುಮಾರ್ ಆಯ್ಕೆ ಖಚಿತ:
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಮೇಶ್‍ಕುಮರ್ ಅವರು ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ತಮ್ಮ ಬಳಿಯೂ ಸಂಖ್ಯಾಬಲ ಇದೆ. ನಾವೇ ಗೆಲ್ಲುತ್ತೇವೆ ಎಂದು ಬಿಜೆಪಿಯ ಸುರೇಶ್‍ಕುಮಾರ್ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಅವರ ಬಳಿ ಸಂಖ್ಯಾಬಲ ಇದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ವಿಶ್ವಾಸಮತಯಾಚನೆ ಮಾಡದೆ ರಾಜೀನಾಮೆ ನೀಡಿ ಹೋಗಿದ್ದೇಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಅವರನ್ನು ಕಡೆಗಣಿಸುತ್ತಿದೆ ಎಂದು ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಜಕೀಯಕ್ಕಾಗಿ ಅವರು ಏನೇನೋ ಮಾತನಾಡುತ್ತಾರೆ. ಅದಕ್ಕೆಲ್ಲಾ ಆದ್ಯತೆ ನೀಡುವ ಅಗತ್ಯವಿಲ್ಲ. ರಮೇಶ್‍ಕುಮಾರ್ ಈ ಹಿಂದೆ ಐದು ವರ್ಷ ಸ್ಪೀಕರ್ ಆಗಿ ಕೆಲಸ ಮಾಡಿರುವ ಅನುಭವ ಮತ್ತು ಜ್ಞಾನ ಉಳ್ಳವರು. ಮುಂದಿನ ಐದು ವರ್ಷ ವಿಧಾನಸಭಾಧ್ಯಕ್ಷರಾಗಿ ಅವರು ಕೆಲಸ ಮಾಡುತ್ತಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಒಮ್ಮತದಿಂದ ಅವರನ್ನು ಕಣಕ್ಕಿಳಿಸಿದೆ ಎಂದರು.

Facebook Comments

Sri Raghav

Admin