ಆರ್.ಆರ್.ನಗರ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ, ಬಿಗಿ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

RR-Nagara-Rajarajeshwari-Na

ಬೆಂಗಳೂರು, ಮೇ 26- ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು.

ವೋಟರ್ ಐಡಿ ಅಕ್ರಮ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಆರ್‍ಆರ್ ನಗರ ಚುನಾವಣೆಯನ್ನು ಮುಂದೂಡಿ ಇದೇ 28ರಂದು ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿತ್ತು.28ರಂದು ನಡೆಯಲಿರುವ ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೇವಲ 37 ಸ್ಥಾನ ಪಡೆದಿದ್ದ ಜೆಡಿಎಸ್ 78 ಸದಸ್ಯಬಲದ ಕಾಂಗ್ರೆಸ್ ಮತ್ತು ಇಬ್ಬರು ಪಕ್ಷೇತರರ ಬೆಂಬಲದೊಂದಿಗೆ ಸರ್ಕಾರ ರಚಿಸಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

104 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಗದೆ ಪರಿತಪಿಸುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿರುವುದನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ ಮುಖಂಡರು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಪರ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಅಖಾಡಕ್ಕಿಳಿದಿದ್ದು, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಆರ್‍ಆರ್ ನಗರ ಚುನಾವಣೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವುದರಿಂದ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಕೇಸರಿ ಪಡೆಯ ಹೆಡೆಮುರಿ ಕಟ್ಟಲು ತೀರ್ಮಾನಿಸಿದ್ದವು. ಆದರೆ, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಹಾಗೂ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು ಕಣದಿಂದ ಹಿಂದೆ ಸರಿಯಲು ಸಮ್ಮತಿಸದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಅನಿವಾರ್ಯವಾಗಿದೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ತಮ್ಮ ಪಕ್ಷದ ಬಗ್ಗೆ ಮತದಾರರಲ್ಲಿ ಒಲವಿದೆ ಎನ್ನುವುದನ್ನು ಸಾಬೀತುಪಡಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ರಾಮಚಂದ್ರ ಅವರ ಪರ ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಜ್ವಲ್ ರೇವಣ್ಣ ಮತ್ತಿತರ ಜೆಡಿಎಸ್ ಮುಖಂಡರು ಮತ ಯಾಚಿಸಿದರು.

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮುನಿರತ್ನ ಅವರು ಎರಡನೆ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದು, ಅವರನ್ನು ಗೆಲ್ಲಿಸಿಕೊಳ್ಳಲು ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಂಸದ ಡಿ.ಕೆ.ಸುರೇಶ್ ಪಣ ತೊಟ್ಟಿದ್ದಾರೆ. ಹೀಗಾಗಿ ಸೋಮವಾರ ನಡೆಯಲಿರುವ ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, 31ರಂದು ನಡೆಯಲಿರುವ ಮತ ಎಣಿಕೆಯಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳ ಹಣೆಬರಹ ಪ್ರಕಟವಾಗಲಿದೆ.

ಬಿಗಿ ಪೊಲೀಸ್ ಬಂದೋಬಸ್ತ್:
ಇದೇ 28ರಂದು ನಡೆಯಲಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಚೇತನ್‍ಸಿಂಗ್ ರಾಥೋಡ್ ತಿಳಿಸಿದರು. ಇಬ್ಬರು ಡಿಸಿಪಿ, 12 ಎಸಿಪಿ, 14 ಇನ್ಸ್‍ಪೆಕ್ಟರ್, 26 ಸಬ್‍ಇನ್ಸ್‍ಪೆಕ್ಟರ್ ಸೇರಿದಂತೆ 880 ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದರ ಜತೆಗೆ 15 ಕೆಎಸ್‍ಆರ್‍ಪಿ, ಸಿಎಆರ್ ತುಕಡಿ ಹಾಗೂ 10 ಅರೆಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

Facebook Comments

Sri Raghav

Admin